ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚಿಕ್ಕಬಳ್ಳಾಪುರದಲ್ಲೇ ಹೆಚ್ಚು ದೂರು

ನಗದು, ವಸ್ತು ವಶ * ಹೊಸಕೋಟೆಗೆ 2ನೇ ಸ್ಥಾನ
Last Updated 2 ಡಿಸೆಂಬರ್ 2019, 20:14 IST
ಅಕ್ಷರ ಗಾತ್ರ

ಬೆಂಗಳೂರು: ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಈವರೆಗೆ 197 ದೂರುಗಳು ದಾಖಲಾಗಿದ್ದು, ಪ್ರತಿ ಮೂರಲ್ಲಿ ಒಂದು ದೂರು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಆರ್‌ಐ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

‘ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 197 ದೂರುಗಳಲ್ಲಿ 67 ದೂರುಗಳು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರಿವೆ. 67 ದೂರುಗಳಲ್ಲಿ 54 ದೂರುಗಳು ನಗದು ಮತ್ತು ವಿವಿಧ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಕ್ಕೆ ಸಂಬಂಧಿಸಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ. ಎರಡನೇ ಸ್ಥಾನದಲ್ಲಿ ಹೊಸಕೋಟೆ ಇದ್ದು, ಅಲ್ಲಿ 32 ಎಫ್‌ಐಆರ್‌ ದಾಖಲಾಗಿವೆ. 26 ಪ್ರಕರಣಗಳಲ್ಲಿ ನಗದು ಮತ್ತು ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 30 ದೂರುಗಳು ಬಾಕಿ ಇದ್ದು, ಸದ್ಯವೇ ಎಫ್‌ಐಆರ್‌ ದಾಖಲಿಸಲಾಗುವುದು’ ಎಂದು ಹೇಳಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ₹10.70 ಕೋಟಿ ನಗದು ಮತ್ತು ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು ಕ್ಷೇತ್ರದಲ್ಲಿ ಅತಿ ಹೆಚ್ಚು ₹3.78 ಕೋಟಿ ಮೊತ್ತದ ವಸ್ತುಗಳು ಹಾಗೂ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ ₹2.07 ಕೋಟಿ ನಗದು, ₹72 ಲಕ್ಷ ಮೌಲ್ಯದ ಮದ್ಯ, ₹ 98.82 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೆ.ಆರ್‌.ಪುರದಲ್ಲಿ ₹1.37 ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕು ಎಂದು ಹೇಳಿದ ಕಾರಣ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಗೋವಿಂದ ಕಾರಜೋಳ ಅವರು ಹಣ ವಿತರಿಸಿದ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಂದ ಹಣ ಪಡೆದು ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT