ಶನಿವಾರ, ಸೆಪ್ಟೆಂಬರ್ 18, 2021
28 °C

ಕೋವಿಡ್‌ನಿಂದ ಮೃತರಾದವರಿಗೆ ಪ್ರತ್ಯೇಕ ದಫನ್‌: ಸಂಸದ ವೈ. ದೇವೇಂದ್ರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ ಮುಂದೆ ಕೋವಿಡ್‌ನಿಂದ ಮೃತರಾದವರಿಗೆ ಪ್ರತ್ಯೇಕವಾದ ಜಾಗ ಗುರುತಿಸಿ, ಅವರನ್ನು ಅಲ್ಲೇ ದಫನ್‌ ಮಾಡಲಾಗುವುದು’ ಎಂದು ಸಂಸದ ವೈ. ದೇವೇಂದ್ರಪ್ಪ ತಿಳಿಸಿದರು.

‘ಕೊರೊನಾ ವ್ಯಾಪಕವಾಗಿ ಹರಡಲು ಆರಂಭಗೊಂಡ ನಂತರ ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಬಹಳ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವೊಂದು ಕಡೆ ಅವೈಜ್ಞಾನಿಕವಾಗಿ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆದಿದೆ. ಭವಿಷ್ಯದಲ್ಲಿ ಆ ರೀತಿ ಆಗದಂತೆ ನೋಡಿಕೊಳ್ಳಲಾಗುವುದು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸೂಕ್ತ ಜಾಗದ ಹುಡುಕಾಟ ನಡೆದಿದೆ. ಹೆಚ್ಚುವರಿ ಆಂಬ್ಯುಲೆನ್ಸ್‌, ವೈದ್ಯಕೀಯ ಸಿಬ್ಬಂದಿ ಜಿಲ್ಲೆಗೆ ಕೊಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಏಕಾಏಕಿ ಹೆಚ್ಚಾಗಿರುವುದಕ್ಕೆ ಎಲ್ಲರೂ ಆತಂಕಗೊಂಡಿದ್ದಾರೆ. ಅದನ್ನು ತಗ್ಗಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಗತ್ಯ ಪರಿಕರಗಳನ್ನು ಒದಗಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ’ ಎಂದು ಹೇಳಿದರು.

‘ಒಂದೆಡೆ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಹೀಗಿದ್ದರೂ ರೈತರು ಅದಕ್ಕೆ ಹೆದರಿ ಮನೆಯಲ್ಲಿ ಕೂತಿಲ್ಲ. ಜಿಲ್ಲೆಯಲ್ಲಿ ಶೇ 80ರಷ್ಟು ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಇನ್ನೂ ಕೆಲವೆಡೆ ಮಳೆಯಾದರೆ ಶೇ 100ರಷ್ಟು ಬಿತ್ತನೆಯಾಗುತ್ತದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಭರದಿಂದ ನಡೆದಿದೆ. ಕೇಳಿದವರಿಗೆಲ್ಲ ಕೆಲಸ ನೀಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೆಲಸ ಕೊಟ್ಟಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಬಳ್ಳಾರಿ ಪಾತ್ರವಾಗಿದೆ. ಪಡಿತರ ವಿತರಣೆಯಲ್ಲೂ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ'  ಎಂದು ವಿವರಿಸಿದರು.

‘ಕೊರೊನಾದಿಂದ ಇಡೀ ಜಗತ್ತಿನ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿದೆ. ಆದರೆ, ರಾಜ್ಯ, ಕೇಂದ್ರ ಸರ್ಕಾರಗಳು ಸಕಾಲಕ್ಕೆ ಕೈಗೊಂಡ ಆರ್ಥಿಕ ಪುನಶ್ಚೇತನದ ಕ್ರಮಗಳಿಂದ ಪರಿಸ್ಥಿತಿ ಸುಧಾರಿಸುತ್ತಿದೆ. ‘ಆತ್ಮ ನಿರ್ಭರ’ ಯೋಜನೆಯಡಿ ಲಕ್ಷಾಂತರ ಜನರಿಗೆ ನೆರವು ನೀಡಲಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಕಾರ್ಯಕರ್ತರು ಸರ್ಕಾರದ ಜತೆ ಕೈಜೋಡಿಸಿ ಕೆಲಸ ನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಉಪಾಧ್ಯಕ್ಷ ಅನಂತ ಸ್ವಾಮಿ, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ್‌ ಮೇಟಿ, ಜೀವರತ್ನಂ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್‌ ಸಿಂಗ್‌, ಮುಖಂಡರಾದ ಕಟಗಿ ರಾಮಕೃಷ್ಣ, ಅಯ್ಯಾಳಿ ತಿಮ್ಮಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು