ಗುರುವಾರ , ಆಗಸ್ಟ್ 6, 2020
24 °C
‘ಕಾಂಗ್ರೆಸ್‌ ಅವಧಿ ಅವ್ಯವಹಾರದ ದಾಖಲೆ ಕೊಡಿ’

ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಬೇರೆಯವರ ಮೇಲೆ ಆರೋಪ ಮಾಡುವ ಮೊದಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೊದಲು ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ತಿರುಗೇಟು ನೀಡಿದರು.

‘ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೂ ಈಗಾಗಕೇ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ: 

‘ಸಿದ್ದರಾಮಯ್ಯ ಸರ್ಕಾರವಿದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದ್ದರು ಎಂಬುದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಮನೆಗಳ ನಿರ್ಮಾಣ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂದು ಈಶ್ವರ ಖಂಡ್ರೆ ಅವರ ಮೇಲೂ ಆರೋಪ ಕೇಳಿಬಂದಿತ್ತು. ಅದೆಲ್ಲವನ್ನೂ ಮೊದಲು ರಾಜ್ಯದ ಜನರ ಮುಂದೆ ಸಿದ್ದರಾಮಯ್ಯ ಇಡಲಿ’ ಎಂದು ಸವಾಲು ಹಾಕಿದರು.

ರಾಜ್ಯ ಸರ್ಕಾರ ಕಾರ್ಯಕ್ಕೆ ಶ್ಲಾಘನೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಕೊರೊನಾ ನಿಯಂತ್ರಿಸಲು ಸಾಕಷ್ಟು ಶ್ರಮಿಸುತ್ತಿದೆ. ಸಮರ್ಥವಾಗಿ ಕೊರೊನಾ ಪರಿಸ್ಥಿತಿ ನಿಭಾಯಿಸುತ್ತಿದೆ. ಪ್ರತಿನಿತ್ಯ ಸಾಕಷ್ಟು ಪಾಸಿಟಿವ್ ವರದಿಗಳು ದಾಖಲಾಗುತ್ತಿವೆ. ಅಷ್ಟೇ ಪ್ರಮಾಣದಲ್ಲಿ ಗುಣಮುಖರಾಗಿ ಬಿಡುಗಡೆ ಸಹ ಆಗುತ್ತಿದ್ದಾರೆ ಎಂದು ಹೇಳಿದರು.

‘2018ರಲ್ಲಿ ಕೊಡಗು ಜಿಲ್ಲೆಯ ಮಳೆಯಿಂದ ಮನೆ ಕಳೆದುಕೊಂಡವರಿಗೆ ಸುಂದರವಾದ ಮನೆಗಳನ್ನೇ ನಿರ್ಮಿಸಿ ವಿತರಣೆ ಮಾಡಲಾಗಿದೆ. 2019ರ ಮಳೆಯಲ್ಲೂ ರಾಜ್ಯದಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು. ಮನೆ ಕಳೆದುಕೊಂಡವರಿಗೆ ಪ್ರತಿ ಕುಟುಂಬಕ್ಕೆ ₹ 1 ಲಕ್ಷ ನೀಡಲಾಗಿದದೆ. ಹಂತ ಹಂತವಾಗಿ ಉಳಿದ ಹಣ ನೀಡಲಾಗುತ್ತಿದೆ’ ಎಂದು ಹೇಳಿದರು.

‌ಕೊರೊನಾ ಸಂಕಷ್ಟದಿಂದ ಭಾರತ ಆರ್ಥಿಕವಾಗಿ ಸಿಲುಕಿದಾಗ ಕೇಂದ್ರ ಸರ್ಕಾರವು ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಆತ್ಮನಿರ್ಭರ ಯೋಜನೆ ಅಡಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದೆ. ಸ್ವಉದ್ಯೋಗ, ಕೃಷಿ ಉತ್ಪಾದನೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಗ್ರಾಮೀಣ ಜನತೆಯ ನೋವಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿವೆ ಎಂದರು.

ಮುಂದೆ ಸ್ಥಳೀಯ ಶಾಸಕರಿಗೆ ಅವಕಾಶ: ‘ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ನಳೀನ್‌ ಕುಮಾರ್‌ ಕಟೀಲ್‌, ‘ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. 311 ಮಂಡಲಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಕೆಲವರಿಗೆ ಅಸಮಾಧಾನವಿದ್ದರೆ ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಪಕ್ಷದಲ್ಲಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿದ್ದು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ, ಸ್ಥಳೀಯ ನಾಯಕರಿಗೂ ಅವಕಾಶ ನೀಡಲಿದ್ದಾರೆ’ ಎಂದು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್‌ ಸುಬ್ರಮಣಿ, ಸಂಸದ ಪ್ರತಾಪ ಸಿಂಹ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್‌ ದೇವಯ್ಯ, ಬಿ.ಬಿ.ಭಾರತೀಶ್‌ ಹಾಜರಿದ್ದರು.

***

ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ; ಸಾಮಾಜಿಕ ನ್ಯಾಯದ ಆಧಾರದ ಮೇಲೆ ಎಲ್ಲರಿಗೂ ಅಧಿಕಾರ ಸಿಗಲಿದೆ

– ನಳಿನ್‌ ಕುಮಾರ್‌ ಕಟೀಲ್‌, ರಾಜ್ಯ ಅಧ್ಯಕ್ಷ, ಬಿಜೆಪಿ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು