ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಭವನ: ಜಾಗ ನೀಡಲು ಆಗ್ರಹ

ಮಡಿಕೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ
Last Updated 27 ಜೂನ್ 2019, 14:26 IST
ಅಕ್ಷರ ಗಾತ್ರ

ಮಡಿಕೇರಿ: ‘ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು.

ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘ಕೆಂಪೇಗೌಡ ಅವರು ಸ್ವಾರ್ಥ ಜೀವನವನ್ನು ಬಿಟ್ಟು ಸಮಾಜಮುಖಿಯಾಗಿ ಯೋಚಿಸಿದರ ಫಲವಾಗಿ ಬೆಂಗಳೂರು ಮಹಾನಗರವಾಗಿ ಬೆಳೆದಿದೆ. ಕೆಂಪೇಗೌಡ ಅವರು ದೂರದೃಷ್ಟಿಯ ಅಗಾಧ ಚಿಂತನೆಯ ಫಲವಾಗಿ ಇಂದು ಉದ್ಯೋಗ, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ... ಹೀಗೆ ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಹೆಸರು ಮಾಡಿದೆ’ ಎಂದು ತಿಳಿಸಿದರು.

ಕೊಡಗು- ಹಾಸನ ಜಿಲ್ಲೆಗಳ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಮಾತನಾಡಿ, ‘ಕೆಂಪೇಗೌಡ ಸೇರಿದಂತೆ ಬಸವೇಶ್ವರರು, ಕನಕದಾಸರು, ಪುರಂದರದಾಸರು, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್‌ ಅವರ ಹಲವು ದಾರ್ಶನಿಕರ ಆದರ್ಶಗಳ ಯುವಕರು ತಿಳಿದುಕೊಂಡು ಅವರಂತೆಯೇ ಜೀವನ ಸಾಗಿಸಬೇಕು’ ಎಂದು ಕರೆ ನೀಡಿದರು.

‘ಕೆಂಪೇಗೌಡರು ಬೆಂಗಳೂರನ್ನು ಕಟ್ಟಿ ಆದರ್ಶ ಆಡಳಿತಗಾರ ಎಂದು ಹೆಸರು ಪಡೆದವರು. ವಿಜಯನಗರ ಸಾಮ್ರಾಜ್ಯದಂತೆ ಬೆಂಗಳೂರನ್ನು ಕಟ್ಟಿ ಬೆಳೆಸಲು ಚಿಕ್ಕ ವಯಸ್ಸಿನಲ್ಲಿಯೇ ಪ್ರಯತ್ನಿಸಿದರು. ಪ್ರಸ್ತುತ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಕಾರಣರಾದವರು’ ಎಂದು ಸ್ಮರಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ‘ಆದರ್ಶ ಆಡಳಿತಗಾರರಲ್ಲಿ ಒಬ್ಬರಾಗಿದ್ದ ಕೆಂಪೇಗೌಡರು ಕೆರೆ ಕಟ್ಟೆಗಳನ್ನು ನಿರ್ಮಿಸಿ ಅಭಿವೃದ್ಧಿಯತ್ತ ಗಮನ ಹರಿಸಿದವರು. ಇದರ ಫಲವಾಗಿಯೇ ಬೆಂಗಳೂರು ಜಗತ್ ಪ್ರಸಿದ್ಧಿಯಾಗಿದೆ’ ಎಂದರು.

‘ವಿಜಯನಗರ ಸಾಮ್ರಾಜ್ಯದಂತೆ ಬೆಂಗಳೂರು ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಕೆಂಪೇಗೌಡರು ಶ್ರಮಿಸಿದ್ದರು’ ಎಂದುಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭವನ ನಿರ್ಮಾಣಕ್ಕೆ ಜಾಗ ನೀಡಬೇಕು. ನಗರದ ಯಾವುದಾದರೂ ವೃತ್ತಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ಹೆಸರಿಡಬೇಕು ಎಂದು ಕುಶಾಲನಗರ ಒಕ್ಕಲಿಗ ಯುವ ವೇದಿಕೆಯ ಮುಖಂಡ ಎಂ.ಡಿ.ಕೃಷ್ಣಪ್ಪ ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ದೀಪಕ್, ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ಹಾಜರಿದ್ದರು.

ರಾಮನಗರದ ಸಿದ್ದರಾಜು ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ ಸ್ವಾಗತಿಸಿದರು. ಎಚ್.ಜಿ.ಕುಮಾರ್ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT