ಗುರುವಾರ , ಮಾರ್ಚ್ 4, 2021
19 °C

2 ದಿನಗಳಲ್ಲಿ ಸಹಜ ಸ್ಥಿತಿಗೆ: ಯಡಿಯೂರಪ್ಪಗೆ ಮುಖ್ಯ ಕಾರ್ಯದರ್ಶಿ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಂದ ಭಾನುವಾರ ಮಾಹಿತಿ ಪಡೆದರು.

ತಾಲ್ಲೂಕಿನ ಸಾಂಬ್ರಾ ವಿಮಾನನಿಲ್ದಾಣದ ಸಭಾಂಗಣದಲ್ಲಿ, ಮಳೆ ವಿವರ ಮತ್ತು ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಮಾಹಿತಿ ಒದಗಿಸಿದರು.

‘ರಾಜ್ಯದಲ್ಲಿ ಭಾನುವಾರ ಆರೆಂಜ್‌ ಅಲರ್ಟ್ ಘೋಷಿಸಲಾಗಿದ್ದು, ಸೋಮವಾರ (ಆ.12) ಯಲ್ಲೋ (ಹಳದಿ) ಅಲರ್ಟ್ ಇರುತ್ತದೆ. ಸಹಜ ಸ್ಥಿತಿಗೆ ಬರುವ ಮುನ್ಸೂಚನೆ ಇದೆ’ ಎಂದು ತಿಳಿಸಿದರು.

‘ಬೆಳಗಾವಿ ಸೇರಿದಂತೆ ರಾಜ್ಯದಾದ್ಯಂತ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್., ವಾಯುಸೇನೆ, ಪೊಲೀಸ್ ಸೇರಿದಂತೆ ವಿವಿಧ ರಕ್ಷಣಾ ತಂಡಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 34 ಜನ ಮೃತಪಟ್ಟಿದ್ದು, ಪ್ರವಾಹ ಹಾಗೂ ಮಳೆಯಿಂದಾಗಿ ಮರಣ ಹೊಂದಿದವರ ಕುಟುಂಬದವರಿಗೆ 48 ಗಂಟೆಗಳಲ್ಲಿ ₹ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಪರಿಹಾರ ಕೇಂದ್ರಗಳನ್ನು ಆರಂಭಿಸಿ ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆಗಳನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಕೂಡ ನೀಡಲಾಗುತ್ತಿದೆ. ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಣೆ ಮಾಡಲಾಗುತ್ತಿದೆ. ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಮತ್ತು ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ ₹ 100 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು.

‘ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹಪೀಡಿತ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. 136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ಶಾಲೆಗಳು, ಪೈಪ್‌ಲೈನ್, ವಿದ್ಯುತ್ ಕಂಬಗಳು ಸೇರಿದಂತೆ ಮೂಲ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ’ ಎಂದು ವಿವರಿಸಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ, ಲಕ್ಷ್ಮೀನಾರಾಯಣ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ. ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು