ಶನಿವಾರ, ಮೇ 30, 2020
27 °C
ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಂವಾದ

ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಲಾಕ್‌ಡೌನ್‌ ಮುಂದುವರಿಕೆ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ ಏ.14 ರವರೆಗೆ ಯಾವ ರೀತಿ ನಡೆಯುತ್ತದೆ ಎಂಬುದರ ಆಧಾರದ ಮೇಲೆ ಲಾಕ್‌ಡೌನ್‌ ವಿಸ್ತರಿಸಬೇಕೊ ಬೇಡವೊ ಎಂಬ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚ್ಯವಾಗಿ ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿನ ಕೋವಿಡ್‌–19 ಪರಿಸ್ಥಿತಿಯ ಬಗ್ಗೆ ವಿಡಿಯೋ ಸಂವಾದದ ಮೂಲಕ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ, ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸಂವಾದದಲ್ಲಿ ಭಾಗವಹಿಸಿದ್ದರು.

ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಬೇಕು. ಅದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಿವಿಧ ಧರ್ಮಗುರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲಾಕ್‌ಡೌನ್‌ ಪರಿಣಾಮಕಾರಿಯಾಗಿಸಬೇಕು ಎಂದು ಮೋದಿ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದ ಯುಡಿಯೂರಪ್ಪ, ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿರುವುದಾಗಿಯೂ ಹೇಳಿದರು.

ಸಂವಾದದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ವೈರಸ್‌ ಹರಡುವಿಕೆಯನ್ನು ನಿಯಂತ್ರಣದಲ್ಲಿಟ್ಟಿರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದರು.

ಆಹಾರ– ಧಾನ್ಯಗಳು, ಹಣ್ಣು– ತರಕಾರಿ ಮತ್ತು ಔಷಧಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ನೋಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲೂ ವೈದ್ಯರ ಕೊರತೆ ಆಗಿಲ್ಲ. ಆಸ್ಪತ್ರೆಗಳು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರುತ್ತವೆ. ಆಯುಷ್‌ ವೈದ್ಯರ ನೆರವನ್ನೂ ಪಡೆಯಲಾಗುವುದು ಎಂದೂ ವಿವರಿಸಿದರು.

ರಾಜ್ಯದಲ್ಲಿ ಈವರೆಗೆ 124 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು, ದೇಶದಲ್ಲಿ 9 ನೇ ಸ್ಥಾನದಲ್ಲಿದೆ. ಕೋವಿಡ್‌–19 ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನೂ ಅವರ ಗಮನಕ್ಕೆ ತರಲಾಯಿತು ಎಂದರು.

ಜನತೆಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್‌ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನಪ್ರಿಯಗೊಳಿಸಿ, ಅವುಗಳನ್ನು ಪಾಲಿಸುವಂತೆ ಮಾಡಬೇಕು. ಇದರಿಂದ ಜನರಿಗೆ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಪ್ರಧಾನಿ ಸಲಹೆ ನೀಡಿದರು.

ಕೃಷಿ ಚಟುವಟಿಕೆಗೆ ವಿನಾಯ್ತಿ: ಕೃಷಿ ಚಟುವಟಿಕೆಗಳಿಗೆ ಲಾಕ್‌ಡೌನ್‌ನಿಂದ ವಿನಾಯ್ತಿ ನೀಡಲಾಗಿದೆ. ಕೃಷಿ ಉತ್ಪನ್ನಗಳನ್ನು ಸಾಗಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮರೆಯಬಾರದು ಮತ್ತು ಬೆಳೆ ಕಟಾವು ಮಾಡುವಾಗಲೂ ಎಚ್ಚರಿಕೆವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು ಎಂದರು.

391 ಜನ ಕ್ವಾರಂಟೈನ್‌: ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ಉಳಿದುಕೊಂಡು ರಾಜ್ಯ ಬಂದಿರುವ 391 ಜನರನ್ನು ಗುರುತಿಸಿ ಹೋಂ ಕ್ವಾರಂಟೈನ್‌ ಮತ್ತು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಇನ್ನುಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

ಎಲ್ಲರನ್ನೂ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗುವುದು. ಬೀದರ್‌ನಲ್ಲಿ 91 ಜನರನ್ನು ಪರೀಕ್ಷಿಸಿದ್ದು 11 ಜನರಲ್ಲಿ ಕೋವಿಡ್‌ 19 ಪತ್ತೆ ಆಗಿದೆ. ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು, ಅವರಿಗೆ ಸೋಂಕು ತಗಲದೇ ಇರುವುದು ತಿಳಿದುಬಂದಿದೆ ಎಂದೂ ತಿಳಿಸಿದರು. 

ಕರ್ನಾಟಕದ ಮಾದರಿ ಪಾಲಿಸಲು ಸೂಚನೆ
ಕೋವಿಡ್‌–19 ನಿಯಂತ್ರಣದ ಸಂಬಂಧ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕೆಲವು ವಿಧಾನಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ವಿಧಾನ ಮತ್ತು ತಂತ್ರಜ್ಞಾನವನ್ನು ಅನುಸರಿಸಲು ಇತರ ರಾಜ್ಯಗಳಿಗೆ ಸಲಹೆ ನೀಡಿದರು.

ವಿಶೇಷವಾಗಿ ವೈರಸ್‌ ಹರಡುವುದನ್ನು ತಡೆಯಲು 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ‘ವಾರ್‌ ರೂಂ’, ಕ್ವಾರಂಟೈನ್‌ನಲ್ಲಿ ಇದ್ದವರನ್ನು ನಿಗಾ ಇಡಲು ಜಿಪಿಎಸ್‌ ವ್ಯವಸ್ಥೆಯನ್ನು ಇತರ ರಾಜ್ಯಗಳೂ ಅಳವಡಿಸುವಂತೆ ಪ್ರಧಾನಿ ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು