ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ ಮೀಸಲಾತಿ: ವಾಟ್ಸ್‌ ಆ್ಯಪ್‌ನಲ್ಲಿ ರೋಹಟಗಿ ಉತ್ತರ!

Last Updated 19 ನವೆಂಬರ್ 2018, 20:01 IST
ಅಕ್ಷರ ಗಾತ್ರ

ಬೆಂಗಳೂರು: ಬಡ್ತಿ ಮೀಸಲಾತಿ ಕಾಯ್ದೆ ಸಂಬಂಧ ರಾಜ್ಯ ಸರ್ಕಾರ ಕೇಳಿರುವ ಕಾನೂನು ಸಲಹೆಗೆ ಹಿರಿಯ ವಕೀಲ ಮುಕುಲ್‌ ರೋಹಟಗಿ ವಾಟ್ಸ್‌ ಆ್ಯಪ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂಬಡ್ತಿಗೆ ಗುರಿಯಾಗಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಸಮಾನಾಂತರ ಹುದ್ದೆ ಕಲ್ಪಿಸಿ, ನ್ಯಾಯ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಷಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹಾಗಾಗಿ, ಅಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದಿರಲು ಸರ್ಕಾರ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯದ ವಕೀಲರ ಜತೆಗೆ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರನ್ನು ತಿಂಗಳುಗಳ ಹಿಂದೆ ನೇಮಿಸಲಾಗಿತ್ತು. ಅವರ ಕಾನೂನು ಸಲಹೆ ಕೇಳಲು ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ರೋಹಟಗಿ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರು ಪತ್ರ ಬರೆದು ಸಲಹೆ ನೀಡುವಂತೆ ಕೋರಿದ್ದರು. ಅದಕ್ಕೆ ರೋಹಟಗಿ ವಾಟ್ಸ್‌ ಆ್ಯಪ್‌ನಲ್ಲೇ ಉತ್ತರ ನೀಡಿರುವ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಸೋಮವಾರ ಚರ್ಚೆಗೆ ಬಂದಿತು. ‘ಈ ಸಲಹೆಗೆ ಕಾನೂನಾತ್ಮಕ ಮಾನ್ಯತೆ ಸಿಗುವುದು ಕಷ್ಟ. ಲಿಖಿತ ಸಲಹೆ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಯಿತು’ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕರ್ನಾಟಕ ರಾಜ್ಯ ಸಿವಿಲ್‌ ಸೇವೆ ಹುದ್ದೆಗಳಿಗೆ ಮೀಸಲಾತಿ ಆಧಾರದಲ್ಲಿ ಬಡ್ತಿ ಹೊಂದಿರುವ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆಯನ್ನು ವಿಸ್ತರಿಸುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳು ಈಗಾಗಲೇ ಒಪ್ಪಿಗೆ ನೀಡಿವೆ. ಈ ಕಾಯ್ದೆಗೆ ರಾಷ್ಟ್ರಪತಿ ಅಂಕಿತವನ್ನೂ ಹಾಕಿದ್ದಾರೆ. ಈ ಕಾಯ್ದೆ ಜಾರಿಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT