ಶನಿವಾರ, ಫೆಬ್ರವರಿ 29, 2020
19 °C
ಪುರಭವನದ ಎದುರು ವಿದ್ಯಾರ್ಥಿನಿಯರ ಆಕ್ರೋಶ l ಹಾಡಿನ ಮೂಲಕ ಟೀಕೆ

ಸಿಎಎ ವಿರುದ್ಧ ‘ಮೌನ ರೂಪಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಶನಿವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು, ಇಂತಹ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುತ್ತಿರುವುದರ ವಿರುದ್ಧ ಮೌನಾಭಿನಯದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

‘ನಾವು ಭಾರತೀಯರು’ ಸಂಘಟನೆ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಯುವಕ–ಯುವತಿಯರು ಏರುಧ್ವನಿಯಲ್ಲಿ ಘೋಷಣೆಗಳನ್ನು ಕೂಗಿದರು. ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದ್ದರಿಂದ ಯಾರಿಗೆ ಅನ್ಯಾಯವಾಗಿದೆ. ಇದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಬಲ ಪ್ರಯೋಗ ನಡೆಸುತ್ತಿದೆ ಎಂಬುದನ್ನು ವಿದ್ಯಾರ್ಥಿನಿಯರು ಮೌನ ರೂಪಕದ ಮೂಲಕ ಕಟ್ಟಿಕೊಟ್ಟರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆಡಳಿತ ವೈಖರಿಯನ್ನು ಟೀಕಿಸುವ ಹಾಡುಗಳನ್ನು ಗಾಯಕರು ಹಾಡಿದಾಗ ಪ್ರತಿಭಟನಕಾರರೆಲ್ಲ ಧ್ವನಿಗೂಡಿಸಿದರು.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ‘ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಮಾಡುವುದು ಸಂವಿಧಾನಕ್ಕೆವಿರುದ್ಧವಾದ ನಡೆ. ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಸಂವಿಧಾನವನ್ನು ಉಳಿಸುವ ಸಲುವಾಗಿ ಈ ನಡೆ ಅನಿವಾರ್ಯ’ ಎಂದು ಸ್ಪಷ್ಟಪಡಿಸಿದರು.

‘ಮಹಿಳೆಯರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಆದರೂ, ವಿದ್ಯಾರ್ಥಿನಿಯರೇ ಹೆಚ್ಚಾಗಿ ಬಂದಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಯಿಂದ ಮಹಿಳೆಯರೇ ಹೆಚ್ಚು ತೊಂದರೆ ಅನುಭವಿಸಲಿದ್ದಾರೆ’ ಎಂದು ಸ್ಟೂಡೆಂಟ್‌ ಇಸ್ಲಾಮಿಕ್ ಆರ್ಗನೈಸೇಷನ್‌ನ(ಎಸ್‌ಐಒ) ರಾಜ್ಯ ಘಟಕದ ಅಧ್ಯಕ್ಷೆ ಉಮೈರಾ ಬಾನು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು