ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗತ ಪಾತಕಿ ರವಿ ಪೂಜಾರಿ ಪ್ರಕರಣ: ಸಿಸಿಬಿಯಿಂದ ಮುತ್ತಪ್ಪ ರೈ ವಿಚಾರಣೆ

Last Updated 16 ಏಪ್ರಿಲ್ 2020, 3:11 IST
ಅಕ್ಷರ ಗಾತ್ರ

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಭಾಗಿಯಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ತಂಡ ತೀವ್ರ ವಿಚಾರಣೆ ನಡೆಸಿದೆ.

'ರೈ ಆನಾರೋಗ್ಯದಲ್ಲಿ ಇರುವುದರಿಂದ ಅವರ ಮನೆಗೆ ತೆರಳಿ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದ ಆಧಿಕಾರಿಗಳ ತಂಡ ರೈ ಅವರನ್ನು ಸುಮಾರು ಎರಡು ತಾಸು ವಿಚಾರಣೆಗೆ ಒಳಪಡಿಸಿದೆ' ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಕ್ಯಾನ್ಸರ್ ಪೀಡಿತರಾಗಿರುವ ರೈ ಅವರ ಆರೋಗ್ಯ ಕೆಲವು ತಿಂಗಳುಗಳಿಂದ ತೀವ್ರ ಹದಗೆಟ್ಟಿದೆ. ರವಿ ಪೂಜಾರಿ ಭಾಗಿಯಾದ ಕೆಲವು ಪ್ರಕರಣಗಳಲ್ಲಿ ರೈ ಹೆಸರೂ ತಳುಕು ಹಾಕಿಕೊಂಡಿದೆ. ಆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ. ಕೆಲವು ಮಹತ್ವದ ಸಂಗತಿಗಳನ್ನು ರೈ ಹಂಚಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸೆನಗಲ್‌ನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿತ್ತು.

ಪೂಜಾರಿ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೇ 50ಕ್ಕೂ ಹೆಚ್ಚು ಪ್ರಕರಣಗಳಿವೆ. ಭೂಗತ ಪಾತಕಿಗಳಾದ ಛೋಟಾ ರಾಜನ್, ದಾವೂದ್ ಇಬ್ರಾಹಿಂ ತಂಡದಲ್ಲಿ ಗುರುತಿಸಿಕೊಂಡಿದ್ದ ರವಿ ಪೂಜಾರಿ ವಿರುದ್ಧ ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗಣ್ಯರಿಗೆ ಬೆದರಿಕೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಗಳೂ ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT