ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿಗಳಲ್ಲಿ ‘ಮೀಸಲು’: ಸಂಪುಟ ಸಭೆಯಲ್ಲಿ ಪ್ರಸ್ತಾವ

ರಾಜ್ಯ ಸರ್ಕಾರದ ಸೂಚನೆಗೆ ಸಚಿವ ಪುಟ್ಟರಂಗಶೆಟ್ಟಿ ಆಕ್ಷೇಪ
Last Updated 17 ನವೆಂಬರ್ 2018, 17:21 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ವೇಳೆ ಮೀಸಲಾತಿ ಅನ್ವಯಿಸುವಾಗ 1998, 1999, 2004ರ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ಅನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅನ್ವಯಿಸಬೇಕೆಂಬ ವಿಚಾರ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದೆ.

ಕೆಪಿಎಸ್‌ಸಿ ನಡೆಯನ್ನು ವಿರೋಧಿಸಿ ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಧ್ವನಿ ಎತ್ತಿದ ಬೆನ್ನಿಗೆ, ಅದನ್ನು ಬೆಂಬಲಿಸಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿದ್ದರು.

ಇದೀಗ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಕೂಡಾ ಕೆಪಿಎಸ್‌ಸಿ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಮುಖ್ಯಮಂತ್ರಿ ಜೊತೆ ಮತ್ತು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

‘ಹೈಕೋರ್ಟ್‌ ತೀರ್ಪು ಆ ಪ್ರಕರಣಕ್ಕೆ ಮಾತ್ರ ಸೀಮಿತವಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ನಿಗದಿಪಡಿಸುವಾಗ ಯಾವ ಆಯ್ಕೆ ವಿಧಾನವನ್ನು ಅನುಸರಿಸಬೇಕೆಂದು 1995ರಲ್ಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ 23 ವರ್ಷಗಳಿಂದ ಈ ಆದೇಶವನ್ನು ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

‘ಹೈಕೋರ್ಟ್ ಆದೇಶ ಪಾಲಿಸುವಂತೆ ಕೆಪಿಎಸ್‌ಸಿ ಕಾರ್ಯದರ್ಶಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಕೋರ್ಟ್‌ ತೀರ್ಪಿನಂತೆ ಮೀಸಲು ನಿಗದಿಪಡಿಸಿದರೆ ಈ ವರ್ಗಗಳ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಕೋಟಾದಡಿ ಹುದ್ದೆಗಳನ್ನು ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ಇದು ಸಹಜ ಸಾಮಾಜಿಕ ನ್ಯಾಯಕ್ಕೆ ವಿರೋಧವಾಗುತ್ತದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT