ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ವರ್ಗದವರಿಗೆ ಮೀಸಲಾತಿ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಸಮ್ಮೇಳನ ಉದ್ಘಾಟನೆ
Last Updated 28 ಡಿಸೆಂಬರ್ 2019, 20:19 IST
ಅಕ್ಷರ ಗಾತ್ರ

ಕುಂದಾಪುರ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶೇ 10 ಮೀಸಲಾತಿಯನ್ನು ದೇಶದ ಹಲವು ರಾಜ್ಯಗಳಲ್ಲಿ ಜಾರಿಗೊಳಿಸಲಾಗಿದೆ. ಅಲ್ಲಿನ ಸರ್ಕಾರಿ ಆದೇಶವನ್ನು ತರಿಸಿಕೊಂಡು ಅಧ್ಯಯನ ನಡೆಸಿ, ರಾಜ್ಯದಲ್ಲಿಯೂ ಮೀಸಲಾತಿ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದರು.

ಕೋಟೇಶ್ವರದ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಶನಿವಾರ ಆರಂಭವಾದ 10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಾಹ್ಮಣ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಸೂಚನೆ ನೀಡಲಾಗುವುದು. ಬೆಂಗಳೂರಿನಲ್ಲಿ ಬ್ರಾಹ್ಮಣ ಮಹಾಸಭಾದಿಂದ ನಿರ್ಮಾಣವಾಗಲಿರುವ ಸಭಾಭವನಕ್ಕೆ ಮೊದಲ ಕಂತಿನಲ್ಲಿ ₹5 ಕೋಟಿ ಬಿಡುಗಡೆ ಮಾಡಲಾಗುವುದು. ಇಂದಿನ ಮಹಾ ಸಮ್ಮೇಳನದಲ್ಲಿ ಪ್ರಸ್ತಾಪಿಸಿರುವ ಬೇಡಿಕೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಭಗವದ್ಗೀತೆ ಹಾಗೂ ಗೋವುಗಳ ವಿಚಾರದಲ್ಲಿ ಸಲ್ಲದ ಮಾತುಗಳು ಪ್ರತಿಧ್ವನಿಸುತ್ತಿವೆ. ಸ್ವಾರ್ಥ ಹಾಗೂ ಅಗ್ಗದ ಪ್ರಚಾರಕ್ಕಾಗಿ ಭಾರತೀಯರ ನಂಬಿಕೆಗಳನ್ನು ಘಾಸಿಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದನ್ನೆಲ್ಲ ನೋಡಿ ಸುಮ್ಮನೆ ಕುಳಿತುಕೊಳ್ಳಲು ನಾವು ತಯಾರಿಲ್ಲ ಎನ್ನುವ ಕಾಲ ಘಟ್ಟದಲ್ಲಿ ದೇಶ ಇದೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಮೇಲುಕೋಟೆ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿನ ಅಮೂಲ್ಯ ತಾಳೆಗರಿಗಳನ್ನು ರಾಜಕೀಯ ಕಾರಣಗಳಿಂದಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇಡಲಾಗಿದೆ. ಈ ತಾಳೆಗರಿಗಳನ್ನು ಸಂರಕ್ಷಣೆ ಮಾಡುವ ಅನಿವಾರ್ಯತೆ ಇರುವುದರಿಂದ ಸಂರಕ್ಷಣೆಗಾಗಿ ಬೇಡಿಕೆ ಇಟ್ಟಿರುವ ಮಠ–ಮಂದಿರಗಳಿಗೆ ಅದನ್ನು ಹಸ್ತಾಂತರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದರು.

ಬ್ರಾಹ್ಮಣ ಮಹಾಸಭಾಧ್ಯಕ್ಷ ಕೆ.ಎನ್.ವೆಂಕಟನಾರಾಯಣ, ಬ್ರಾಹ್ಮಣ ಮಹಾಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT