ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ನೀಡದಂತೆ ಮನವೊಲಿಸುವೆ : ಸಾ.ರಾ.ಮಹೇಶ್‌

Last Updated 3 ಜೂನ್ 2019, 18:27 IST
ಅಕ್ಷರ ಗಾತ್ರ

ಮೈಸೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಅಡಗೂರು ಎಚ್‌.ವಿಶ್ವನಾಥ್‌ ಅವರ ಮನವೊಲಿಸುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಇಲ್ಲಿ ಸೋಮವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಹಿಂದುಳಿದ ವರ್ಗಕ್ಕೆ ಸೇರಿದ ವಿಶ್ವನಾಥ್‌ ಅವರು ಪಕ್ಷದ ಆಸ್ತಿ ಇದ್ದಂತೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜೆಡಿಎಸ್‌ ಶಾಸಕರ ಸಭೆ ನಡೆಯಲಿದೆ. ಸಭೆಯಲ್ಲಿ ಈ ಕುರಿತು ಚರ್ಚಿಸುವೆ’ ಎಂದು ಹೇಳಿದರು.

‘ಬಿಜೆಪಿಯ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ, ನಾವು ಬಿಜೆಪಿಯಂತೆ ಆಪರೇಷನ್‌ ಮಾಡುವುದಿಲ್ಲ. ಮೈತ್ರಿ ಪಕ್ಷಗಳಲ್ಲಿರುವಂತೆ ಬಿಜೆಪಿಯಲ್ಲೂ ಭಿನ್ನಾಭಿಪ್ರಾಯಗಳಿವೆ’ ಎಂದು ಕುಟುಕಿದರು.

ಮಡಿಕೇರಿಯಿಂದಲೇ ಮಾಡಲಿ: ‘ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಮಡಿಕೇರಿಯಿಂದಲೇ ಮಾಡಲಿ. ಇದರಿಂದ ಜನರಿಗೆ ಧೈರ್ಯ ಬರುತ್ತದೆ. ಮಂಡ್ಯದಲ್ಲಿ ಗ್ರಾಮ ವಾಸ್ತವ್ಯ ಹೂಡುವಾಗ ನಿಖಿಲ್‌ ಕೂಡ ಜತೆಗಿರುವರು’ ಎಂದು ಅವರು ಹೇಳಿದರು.

ಜೆಡಿಎಸ್‌ ಶಾಸಕರ ಸಭೆ ಇಂದು
ಬೆಂಗಳೂರು:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆ.‍ಪಿ.ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್‌ ಶಾಸಕರ ಸಭೆಯನ್ನು ಮಂಗಳವಾರ ಸಂಜೆ ಕರೆದಿದ್ದಾರೆ.

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಈಗಿನ ರಾಜಕೀಯ ಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಡುವ ಸಲುವಾಗಿ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಪ್ರಮುಖವಾಗಿ ಚರ್ಚೆಯಾಗಲಿದೆ. ತಮ್ಮ ಪಕ್ಷದ ಪಾಲಿಗೆ ಬಂದಿದ್ದು, ಖಾಲಿ ಇರುವ ಎರಡು ಸ್ಥಾನಗಳನ್ನು ಪಕ್ಷೇತರ ಶಾಸಕರಿಗೆ ನೀಡಿ ಭರ್ತಿ ಮಾಡುವ ಬಗ್ಗೆ ಪ್ರಸ್ತಾಪಿಸಲಾಗುತ್ತದೆ. ಸಂಪುಟ ವಿಸ್ತರಣೆಗೂ ಮುನ್ನ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿಯೇ ಸಭೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಸರ್ಕಾರದ ಸಾಧನೆಗಳು, ಜನರು ಹಾಗೂ ವಿರೋಧ ಪಕ್ಷಗಳಿಂದ ಬರುತ್ತಿರುವ ಟೀಕೆಗಳಿಗೆ ಸ್ಪಂದಿಸಬೇಕು. ಆಡಳಿತ ಯಂತ್ರ ಚುರುಕುಗೊಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT