ಗುರುವಾರ , ಮಾರ್ಚ್ 4, 2021
30 °C
ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ಮೂಲಸೌಕರ್ಯ

ಶಾಲಾ ಕಟ್ಟಡಗಳ ದುರಸ್ತಿ: ಸಿ.ಎಂ ಅಸ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘₹ 300 ಕೋಟಿ ವೆಚ್ಚದಲ್ಲಿ 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣ, 233 ಸರ್ಕಾರಿ ಪ್ರೌಢಶಾಲಾ ಕಟ್ಟಡಗಳನ್ನು ನೆಲಸಮಗೊಳಿಸಿ ₹ 78.90 ಕೋಟಿ ವೆಚ್ಚದಲ್ಲಿ ಮರು ನಿರ್ಮಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ನಬಾರ್ಡ್ ವತಿಯಿಂದ ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ₹ 150 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದೂ ಅವರು ತಿಳಿಸಿದರು. ’ಪ್ರಜಾವಾಣಿ’ ಶಿಥಿಲ ಸ್ಥಿತಿಗೆ ತಲುಪಿದ ಶಾಲಾ ಕಟ್ಟಡಗಳ ಬಗ್ಗೆ ಸರಣಿ ವರದಿಯನ್ನು ಪ್ರಕಟಿಸಿತ್ತು.

2018-19ನೇ ಸಾಲಿನ ಆಯವ್ಯಯದಲ್ಲಿ ನಬಾರ್ಡ್ ಕಾಮಗಾರಿಗಳಿಗೆ ₹ 5.76 ಕೋಟಿ ಹಂಚಿಕೆ ಮಾಡಲಾಗಿದೆ. ಅಗತ್ಯವಿರುವ ₹ 39.42 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಕಾಲೇಜು ಶಿಕ್ಷಣ ಇಲಾಖೆಯಲ್ಲಿ 395 ಪ್ರಾಂಶುಪಾಲರು ಮತ್ತು 480 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಒಟ್ಟು 3,000 ಹುದ್ದೆಗಳನ್ನು ಸೃಜಿಸ
ಬೇಕಿದೆ’ ಎಂದು ಇಲಾಖೆ ಆಯುಕ್ತರಾದ ಎನ್. ಮಂಜುಳಾ ತಿಳಿಸಿದಾಗ, ಈ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿ.ಎಂ ಸಲಹೆ ನೀಡಿದರು.

‘ನವದೆಹಲಿ ಮಾದರಿ ಜಾರಿ’

ನವದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಮಾಡಿರುವ ಸುಧಾರಣಾ ಕ್ರಮಗಳ ಕುರಿತು ಅಧ್ಯಯನ ಮಾಡಿ ರಾಜ್ಯದಲ್ಲೂ ಅಳವಡಿಸಬಹುದಾದ ಪದ್ಧತಿಗಳ ಬಗ್ಗೆ ವರದಿ ನೀಡುವಂತೆ ಕುಮಾರಸ್ವಾಮಿ ಅವರು, ಅಧಿಕಾರಿಗಳಿಗೆ ಸೂಚಿಸಿದರು.

‘ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ನೆರವಾಗುವಂಥ ಶಿಕ್ಷಣ ಒದಗಿಸುವುದು ಸರ್ಕಾರದ ಆದ್ಯತೆಗಳಲ್ಲಿ ಒಂದು. ಗುಣಮಟ್ಟದ ಶಿಕ್ಷಣ ಒದಗಿಸುವ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು.ಈ ಬಗ್ಗೆ ಕ್ರಮವಹಿಸಿ ವರದಿ ನೀಡಿ’ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಆಯುಕ್ತ ಪಿ.ಸಿ. ಜಾಫರ್ ಅವರಿಗೆ ಆದೇಶಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.