ಸರ್ಕಾರದ ಅಸ್ಥಿರ ಯತ್ನ ಬೇಡ: ರಾಹುಲ್‌ ಸಲಹೆ

7

ಸರ್ಕಾರದ ಅಸ್ಥಿರ ಯತ್ನ ಬೇಡ: ರಾಹುಲ್‌ ಸಲಹೆ

Published:
Updated:
Deccan Herald

ನವದೆಹಲಿ: ಜೆಡಿಎಸ್ ಜತೆ ಮೈತ್ರಿಯೊಂದಿಗೆ ಮುಂಬರುವ ಲೋಕಸಭೆಯ ಚುನಾವಣೆ ಎದುರಿಸಲು ನಿರ್ಧರಿಸಿರುವ ಕಾಂಗ್ರೆಸ್‌ ಹೈಕಮಾಂಡ್‌, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಧ್ವನಿ ಎತ್ತದಂತೆ ಪಕ್ಷದ ಹಿರಿಯ ನಾಯಕರಿಗೆ ತಾಕೀತು ಮಾಡಿದೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್‌ಗೆ ಕಾಂಗ್ರೆಸ್‌ ಬೇಷರತ್‌ ಬೆಂಬಲ ನೀಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸುಗಮವಾಗಿ ಅಧಿಕಾರ ನಡೆಸಲು ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.

ಅನುದಾನ ಹಂಚಿಕೆ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ರಾಜ್ಯದ ಕೆಲ ಕಾಂಗ್ರೆಸ್‌ ಮುಖಂಡರು ಹೈಕಮಾಂಡ್‌ಗೆ ದೂರು ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಕಟ್ಟುನಿಟ್ಟಿನ ಆದೇಶ ಹೊರಬಿದ್ದಿದೆ.

ಸಿದ್ದರಾಮಯ್ಯಗೆ ರಾಹುಲ್‌ ಕಿವಿಮಾತು

ಯಾವುದೇ ಕಾರಣಕ್ಕೂ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕದಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸಲಹೆ ಮಾಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಬಂದಿದ್ದ ಸಿದ್ದರಾಮಯ್ಯ ಅವರಿಗೆ ಮೈತ್ರಿಧರ್ಮಕ್ಕೆ ಅನುಗುಣವಾಗಿ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಈ ಸಲಹೆ ಭಾರಿ ಮಹತ್ವ ಪಡೆದುಕೊಂಡಿದೆ.

ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಸಿದ್ದರಾಮಯ್ಯ  ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವುದರಿಂದ ಪಕ್ಷದ ಕೆಲವು ಮುಖಂಡರು ತೀವ್ರ ಮುಜಗರಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರು ಮತ್ತು ಶಾಸಕರ ಜತೆ ಪದೇ ಪದೇ ನಡೆಸುತ್ತಿರುವ ಔತಣಕೂಟ ಮತ್ತು ಸಭೆಗಳು ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಭಾವನೆ ಮೂಡಿಸಿದೆ. ಜನರಿಗೆ ತಪ್ಪು ಸಂದೇಶ ರವಾನಿಸಿದೆ ಎಂದು ರಾಜ್ಯ ಕಾಂಗ್ರೆಸ್‌ ಮುಖಂಡರು ಹೈಕಮಾಂಡ್‌ಗೆ ದೂರು ನೀಡಿದ್ದರು.

‘ಭಿನ್ನಾಭಿಪ್ರಾಯ: ಬಹಿರಂಗ ಚರ್ಚೆ ಬೇಡ’

ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯ, ಸಮಸ್ಯೆಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿ
ಕೊಳ್ಳುವಂತೆ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.

ಯಾವುದೇ ವಿಷಯವನ್ನು ಬಹಿರಂಗವಾಗಿ ಇಲ್ಲವೇ ಮಾಧ್ಯಮಗಳ ಎದುರು ಚರ್ಚಿಸದಂತೆಯೂ ತಾಕೀತು ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೂ ಇದೇ ಮಾತನ್ನು ಹೇಳಲಾಗಿದೆ ಎನ್ನಲಾಗಿದೆ.

ಹೈಕಮಾಂಡ್‌ ಆತಂಕ ಏನು?

ಮೈತ್ರಿ ಸರ್ಕಾರದಲ್ಲಿ ಅಪಸ್ವರ ತೀವ್ರಗೊಂಡರೆ ಲೋಕಸಭೆ ಚುನಾವಣೆಯ ಪ್ರಚಾರ ಮತ್ತು ಫಲಿತಾಂಶದ ಮೇಲೆ ಅದರ ದುಷ್ಪರಿಣಾಮ ಬೀರುತ್ತದೆ ಎನ್ನುವುದು ವರಿಷ್ಠರ ಆತಂಕಕ್ಕೆ ಕಾರಣವಾಗಿದೆ.

ಬಿಜೆಪಿಯನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಸಮಾನ ಮನಸ್ಕ ಪಕ್ಷಗಳ ಜತೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ಕರ್ನಾಟಕದಲ್ಲಿ ಜೆಡಿಎಸ್‌ ಜತೆ ಮೈತ್ರಿಗೆ ಸಜ್ಜಾಗಿದೆ.

ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ನ ಕೆಲವು ಮುಖಂಡರು ಮೈತ್ರಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದರಿಂದ ಮೈತ್ರಿಗೆ ಹಿನ್ನಡೆಯಾಗುತ್ತದೆ ಎನ್ನುವುದು ಹೈಕಮಾಂಡ್‌ ಆತಂಕಕ್ಕೆ ಕಾರಣವಾಗಿದೆ.

ಮೈತ್ರಿಧರ್ಮಕ್ಕೆ ಯಾವುದೇ ರೀತಿಯಲ್ಲಿತೊಂದರೆಯಾಗದಂತೆ ಹೊಂದಾಣಿಕೊಂಡು ಹೋಗುವಂತೆ ಹೈಕಮಾಂಡ್‌ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಕಿವಿಮಾತು ಹೇಳಿದೆ ಎಂದು ಮೂಲಗಳು ತಿಳಿಸಿವೆ.

* ಆಪ್ತ ಸಚಿವರು ಮತ್ತು ಶಾಸಕರ ಸಭೆ ನಡೆಸುವುದು ತಪ್ಪಲ್ಲ. ಭಿನ್ನಮತಿಯ ಚಟುವಟಿಕೆಗಳಿಗೆ ಅಂತಹ ಸಭೆಗಳು ಕುಮ್ಮಕ್ಕು ನೀಡುತ್ತಿವೆ ಎಂಬ ತಪ್ಪು ಭಾವನೆ ಮೂಡಬಾರದು
- ರಾಹುಲ್‌ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ 

 

ಬರಹ ಇಷ್ಟವಾಯಿತೆ?

 • 11

  Happy
 • 0

  Amused
 • 1

  Sad
 • 1

  Frustrated
 • 4

  Angry

Comments:

0 comments

Write the first review for this !