ಮಂಗಳವಾರ, ಜುಲೈ 14, 2020
28 °C

ರೈತರ, ಶ್ರಮಿಕರ ಕಷ್ಟಕ್ಕೆ ಸ್ಪಂದಿಸದ ಸರ್ಕಾರ: ಸಿದ್ದರಾಮಯ್ಯ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‍ಡೌನ್‌ನಿಂದಾಗಿ ತೊಂದರೆಗೆ ಸಿಲುಕಿರುವ ರೈತರು, ಶ್ರಮಿಕ ವರ್ಗದವರ ಪರ ಸಂಘಟಿತ ಹೋರಾಟ ನಡೆಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

‘ಕೊರೊನಾ ವಿಚಾರದಲ್ಲಿ ವಿರೋಧ ಪಕ್ಷಗಳು ಮೊದಲಿನಿಂದಲೂ ಸರ್ಕಾರಕ್ಕೆ ಸಹಕಾರ ನೀಡುತ್ತಾ ಬಂದಿವೆ. ಆದರೂ ವಿರೋಧ ಪಕ್ಷಗಳು ರೈತರು, ಶ್ರಮಿಕ ವರ್ಗದವರ ಬಗ್ಗೆ ನೀಡುತ್ತಿರುವ ಮನವಿಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಈ ವಿಚಾರದಲ್ಲಿ ನಮ್ಮ ಸಹನೆ ಕೆಣಕಬೇಡಿ’ ಎಂದು ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ‘ರಾಜ್ಯದಲ್ಲಿ 49 ದಿನಗಳಿಂದ ಲಾಕ್‍ಡೌನ್ ಜಾರಿಯಲ್ಲಿದೆ. ಇದರಿಂದಾಗಿ ರೈತರು ಭಾರಿ ತೊಂದರೆಗೆ ಒಳಗಾಗಿದ್ದಾರೆ. ಈ ಕುರಿತು ಇಂದಿನ ಸಭೆಯಲ್ಲಿ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಸಿದ್ದೇವೆ. ರೈತರ ಜೊತೆಗೆ ವಿವಿಧ ವಲಯಗಳ ಕಾರ್ಮಿಕರು, ಸಾಪ್ರದಾಯಿಕ ವೃತ್ತಿಯನ್ನು ಅವಲಂಬಿಸಿ ಜೀವನ ನಡೆಸುತ್ತಿರುವ ವಿವಿಧ ಸಮುದಾಯಗಳವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು’ ಎಂದರು.

‘ಸಭೆಯಲ್ಲಿ ಇಂದು ನಡೆದ ಚರ್ಚೆಯನ್ನು ಆಧರಿಸಿ ಮೊದಲು ಬೇಡಿಕೆಗಳ ಪಟ್ಟಿಯೊಂದನ್ನು ಸಿದ್ಧಪಡಿಸಲಾಗುವುದು. ಬಳಿಕ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಕಿವಿಗೊಡದಿದ್ದರೆ ವಿರೋಧ ಪಕ್ಷಗಳು ಒಟ್ಟಾಗಿ ಬೀದಿಗಿಳಿಯುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದರು.

‘ಇದು ಚುನಾವಣಾ ರಾಜಕೀಯವಲ್ಲ. ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಗುರಿಯಾಗಿರುವ ರೈತರು, ಶ್ರಮಿಕ ವರ್ಗದವರ ನೆರವಿಗೆ ಸರ್ಕಾರ ಧಾವಿಸಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಒಟ್ಟಾಗಿ ಹೋರಾಟ ನಡೆಸಲು ನಾವೆಲ್ಲ ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದರು.

‘ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸುಮ್ಮನೆ ಕೂರುವಂತಿಲ್ಲ. ಕೇರಳ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ₹ 20 ಸಾವಿರ ಕೋಟಿ ವೆಚ್ಚ ಮಾಡಿಲ್ಲವೇ? ಒಂದು ವೇಳೆ ಹಣಕಾಸು ತೊಂದರೆ ಇದ್ದಲ್ಲಿ ರಾಜ್ಯ ಸರ್ಕಾರ ಕೇಂದ್ರದ ನೆರವು ಕೋರಲಿ’ ಎಂದು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕಾಂಗ್ರೆಸ್ ಮುಖಂಡರಾದ ರಮೇಶ್ ಕುಮಾರ್, ವಿ.ಎಸ್. ಉಗ್ರಪ್ಪ, ಜೆಡಿಎಸ್‍ನ ಎಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪೂರ, ವೆಂಕಟರಾವ್ ನಾಡಗೌಡ, ಕುಪೇಂದ್ರ ರೆಡ್ಡಿ, ಚೌಡರೆಡ್ಡಿ ತೂಪಲ್ಲಿ, ಸಿಪಿಎಂನ ನಾಗರಾಜು, ಬಸವರಾಜು, ಸಿಪಿಐನ ಸಾತಿ ಸುಂದರೇಶ್, ಲೋಕತಾಂತ್ರಿಕ ಜನತಾದಳದ ಡಾ. ಎಂ.ಪಿ.ನಾಡಗೌಡ, ರೈತ ಸಂಘಟನೆಗಳ ಕೋಡಿಹಳ್ಳಿ ಚಂದ್ರಶೇಖರ, ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್ ಇದ್ದರು.

*
ಸರ್ಕಾರವೇ ಹಣ್ಣು, ತರಕಾರಿಯನ್ನು ರೈತರಿಂದ ಖರೀದಿಸಿ, ನ್ಯಾಯಬೆಲೆ ಅಂಗಡಿಗಳ ಮೂಲಕ ಬಡವರಿಗೆ ಉಚಿತವಾಗಿ ವಿತರಿಸಲಿ. -ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು