ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ– ರಾಜ್ಯ ಸರ್ಕಾರದಿಂದ ಜನವಿರೋಧಿ ನೀತಿ: ಸಿದ್ದರಾಮಯ್ಯ ಟೀಕೆ

Last Updated 27 ಜೂನ್ 2020, 11:55 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ‘ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ರೂಪಿಸಬೇಕಾಗಿದೆ’ ಎಂದರು.

‘ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು ₹ 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ ₹ 25ರ ಆಸುಪಾಸಿನಲ್ಲಿ ಇರಬೇಕಿತ್ತು. ಆದರೆ, ಇಂದು ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆ ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ– ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಎರಡೂ ಸರ್ಕಾರಗಳು ಜನರಿಗೆ ದ್ರೋಹ ಮಾಡಿವೆ. ದೇಶದ ಆರ್ಥಿಕ ಪರಿಸ್ಥಿತಿ‌ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪಕ್ಷದ ಹಿರಿಯ ಮುಖಂಡರ ಸಭೆ ನಡೆಯಿತು

‘ಲಾಕ್ ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ. ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಿಸಿರುವ ಪ್ಯಾಕೇಜ್ ಈವರೆಗೂ ತಲುಪಿಲ್ಲ. ಲಾಕ್ ಡೌನ್ ಸಮಯದಲ್ಲೇ ಜನರ ಕೈಗೆ ಹಣ ಕೊಟ್ಟಿದ್ದರೆ ಅವರಿಗೆ ಈಗ ಕಷ್ಟ ಬರುತ್ತಿರಲಿಲ್ಲ. ಕೊರೊನಾ ವಿಚಾರದಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಪರಿಸ್ಥಿತಿ ಇದೆ. ಜಿಡಿಪಿಯಲ್ಲಿ ಶೇ 1ರಷ್ಟನ್ನೂ‌ ಸರ್ಕಾರ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ ಎಂದು ದೂರಿದರು.

‘ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ, ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಗುಲಾಮನಂತೆ ವರ್ತಿಸುತ್ತಿದೆ. ತಿದ್ದುಪಡಿ ಆರಂಭದಲ್ಲಿ ಚೆನ್ನಾಗಿ ಕಂಡರೂ ಮುಂದಿನ ದಿನಗಳಲ್ಲಿ ರೈತರು ಬೀದಿ ಪಾಲಾಗುತ್ತಾರೆ’ ಎಂದು ಅವರು ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ ಕಾಯ್ದೆಗೂ ತಿದ್ದುಪಡಿ ತರಲಾಗುತ್ತಿದೆ.‌ ಉಳುವವನಿಗೇ ಭೂಮಿ ಕೊಡಬೇಕು. ಬಡವರಿಗೆ ಭೂಮಿ ಹಂಚಬೇಕು ಎಂಬುದು ಕಾಂಗ್ರೆಸ್ ನಿಲುವು. ಇದನ್ನೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು. ಉದ್ದೇಶಿತ ತಿದ್ದುಪಡಿ ಪ್ರಕಾರ ಯಾರು ಬೇಕಾದರೂ ಕೃಷಿ ಭೂಮಿ‌ ಖರೀದಿಸಬಹುದು. ನಾವು ಉಳ್ಳವರಿಗೆ ಭೂಮಿ ಕೊಟ್ಟರೆ, ಸರ್ಕಾರ ಉಳ್ಳವರಿಗೆ ಕೃಷಿ ಭೂಮಿ ಧಾರೆ ಎರೆಯಲು ಮುಂದಾಗಿದೆ. ಇದರ ವಿರುದ್ಧವೂ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT