ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದಾಸೀನ-ಉಡಾಫೆತನ ಮುಂದುವರಿಸಿದರೆ ಬೀದಿಗಿಳಿದು ಹೋರಾಟ: ಸಿದ್ದರಾಮಯ್ಯ ಎಚ್ಚರಿಕೆ

ಕೊರೊನಾ ನಿಯಂತ್ರಣ: ಶ್ವೇತಪತ್ರ ಹೊರಡಿಸಲು ಆಗ್ರಹ​
Last Updated 28 ಜೂನ್ 2020, 7:24 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ತಕ್ಷಣ ಶ್ವೇತಪತ್ರ ಹೊರಡಿಸಿ ಸಂಪೂರ್ಣ ವಿವರವನ್ನು ಜನರ ಮುಂದಿಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಕೆ‌ ನೀಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?ಕೇಂದ್ರ ಸರ್ಕಾರದಿಂದ ಈವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? ಎನ್ನುವ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನರ ಮುಂದಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನು ಹಲವು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು ಎಂದಿದ್ದಾರೆ.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತುಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥ ಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್‌ಡೌನ್‌ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ. ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ. ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

15 ದಿನಗಳಿಂದ ಪರೀಕ್ಷೆಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11,000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ. ರಾಜ್ಯದಲ್ಲಿ9,200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯ ಇರುವುದು ಕೇವಲ 1,500 ಮಾತ್ರ. ಕೇಂದ್ರವನ್ನು 33,000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7,000 ಮಾತ್ರ ಇವೆ.ಅಗತ್ಯ ಇರುವುದು 20,000 ವೆಂಟಿಲೇಟರ್ ಎಂದು ಹೇಳಲಾಗಿದೆ.

ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ, ಮಾರುಕಟ್ಟೆ ದರಗಳಿಗಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ರೀತಿಯ ಹಣದ ಮೊತ್ತ ಸುಮಾರು 3,300 ಕೋಟಿಗಳೆಂಬ ಆರೋಪ ಕೇಳಿಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT