ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಯಕವೇ ಕೈಲಾಸ’ ಎಂದು ಬಸವಣ್ಣನ ವಚನ ಹೇಳಿದರೆ ಉದ್ಯೋಗ ಸೃಷ್ಟಿಯಾಗುವುದೇ?

Last Updated 5 ಜುಲೈ 2019, 13:06 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ತಿಳಿದಿರಲಿ,‘ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಜೆಟ್‌ ವಿರುದ್ಧ ಗುಡುಗಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಬಜೆಟ್‌ ಭಾಷಣದ ವೇಳೆ ಬಸವಣ್ಣನವರ ವಚನ ‘ಕಾಯಕವೇ ಕೈಲಾಸ’ ಎಂಬ ಮಾತನ್ನು ಉಲ್ಲೇಖಿಸುತ್ತಾ ‘ಸರ್ಕಾರ ಒಂದು ಕೋಟಿ ಯುವಕರಿಗೆ ಉದ್ಯಮ ಕೌಶಲ ತರಬೇತಿ ನೀಡಲಿದೆ,’ ಎಂದು ಹೇಳಿದ್ದರು. ಅತ್ತ ನಿರ್ಮಲಾ ಅವರು ತಮ್ಮ ಭಾಷಣ ಅಂತ್ಯಗೊಳಸಿಸುತ್ತಲೇ ಇತ್ತ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರವು ರೈತರು, ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್‌ ಅನ್ನು ವಿಶ್ಲೇಷಿಸಿದರು.

‘ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ‌ ಸಚಿವರೇ,‘ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಟೀಕಿಸಿದ್ದಾರೆ.

‘ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಯುವಜನತೆ ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ. ಈ ಎರಡು ಮುಖ್ಯ ಸಮಸ್ಯೆಗಳನ್ನು ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಸಾಲ ಮನ್ನಾಕ್ಕಾಗಿ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ಕರ್ನಾಟಕದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಈಗಿನ ಮೈತ್ರಿ ಸರ್ಕಾರಗಳೆರಡೂ ರೈತರ ಮೊರೆಗೆ ಓಗೊಟ್ಟು ಸಾಲ ಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದೆ. ಆದರೆ ನರೇಂದ್ರ ಮೋದಿ ಸರ್ಕಾರ ರೈತರ ಮೊರೆ ಕೇಳದೆ ಕಿವುಡಾಗಿದೆ,’ಎಂದು ಕಿಡಿ ಕಾರಿದ್ದಾರೆ. ‌

‘ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರಕ್ಷೇತ್ರಗಳನ್ನು ನಿರ್ಲಕ್ಷಿಸಲಾಗಿದೆ. ನಿರುದ್ಯೋಗ ತಾಂಡವವಾಡುತ್ತಿರುವಾಗ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿರುವುದರಿಂದ ನಿರುದ್ಯೋಗದ ಪ್ರಮಾಣ ಮಾತ್ರವಲ್ಲ, ವಲಸೆ ಪ್ರಮಾಣ ಕೂಡಾ ಹೆಚ್ಚಾಗಲಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆ ಎಂದು 5 ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಆಯವ್ಯಯ ಪತ್ರದಲ್ಲಿಯೂ ಅದರ ಬಗ್ಗೆ ಉಲ್ಲೇಖ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ 0.3 % ನಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿ,‘ ಎಂದು ಅವರು ಆರೋಪಿಸಿದ್ದಾರೆ.

‘ಜಾಗತಿಕವಾಗಿ ತೈಲ ಬೆಲೆ ಕಡಿಮೆಯಾಗುತ್ತಿದ್ದರೂ ನರೇಂದ್ರ ಮೋದಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ,‘ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT