ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘104 ವಿದ್ಯಾರ್ಥಿನಿಲಯಗಳಿಗೆ ಜಾಗ’

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ
Last Updated 17 ಡಿಸೆಂಬರ್ 2018, 20:15 IST
ಅಕ್ಷರ ಗಾತ್ರ

ಬೆಳಗಾವಿ: ‘ಐದು ತಿಂಗಳಲ್ಲಿ ಇಲಾಖೆಯ 104 ವಿದ್ಯಾರ್ಥಿ ನಿಲಯಗಳಿಗೆ ನಿವೇಶನ ಒದಗಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಸೋಮವಾರ ಬಿಜೆಪಿಯ ಅರುಣ್‌ ಶಹಾಪುರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಇಲಾಖೆಯ ಅನೇಕ ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವುಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ₹ 2,500 ಕೋಟಿ ಅಗತ್ಯವಿದೆ. ಎಲ್ಲೆಲ್ಲಿ ಸ್ವಂತ ಕಟ್ಟಡಗಳ ಅಗತ್ಯವಿದೆ ಎಂಬ ಬಗ್ಗೆ ಅಧ್ಯಯನ ನಡೆಸಲು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ’ ಎಂದರು.

‘ಹೊಸ ಕಟ್ಟಡಗಳಿಗೆ ಅನುದಾನ ಹೊಂದಿಸುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದ್ದೇವೆ. ಸ್ವಂತ ಕಟ್ಟಡ ಹೊಂದುವ ನಿಟ್ಟಿನಲ್ಲಿ ಶೀಘ್ರವೇ ಕಾರ್ಯಪ್ರವೃತ್ತರಾಗಲಿದ್ದೇವೆ’ ಎಂದು ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅಭಿವೃದ್ಧಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಯ ಅನುದಾನ ಲಭಿಸುತ್ತದೆ. ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಕೇಂದ್ರ ಸರ್ಕಾರದಿಂದಲೂ ಅನುದಾನ ಸಿಗುತ್ತದೆ. ಆದರೆ, ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳು ಅನುದಾನದ ಕೊರತೆಯಿಂದಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿವೆ’ ಎಂದು ಕಾಂಗ್ರೆಸ್‌ನ ಎಚ್‌.ಎಂ.ರೇವಣ್ಣ ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ, ‘ನಮ್ಮ ಇಲಾಖೆಯ ವಿದ್ಯಾರ್ಥಿನಿಲಯಗಳಿಗೂ ಸ್ವಂತ ಕಟ್ಟಡ ನಿರ್ಮಿಸುವವ ಬಗ್ಗೆ ಪರಿಶೀಲನೆ ನಡೆಸಲು ಉನ್ನತ ಅಧಿಕಾರಿಗಳ ಸಮಿತಿ ರಚಿಸುತ್ತೇವೆ. 246 ಕಡೆ ಹೊಸ ವಿದ್ಯಾರ್ಥಿನಿಲಯಗಳ ಮಂಜೂರಾತಿ ಕೋರಿ ಇಲಾಖೆಗೆ ಅರ್ಜಿಗಳು ಬಂದಿವೆ’ ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ತಿಳಗೊಳ ಗ್ರಾಮಕ್ಕೆ ಮಂಜೂರಾದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿನಿಲಯವನ್ನು ಬೇರೆ ಕಡೆ ಸ್ಥಳಾಂತರ ಮಾಡಬಾರದು. ಅಲ್ಲೇ ಆರಂಭಿಸಬೇಕು ಎಂದು ಅರುಣ್‌ ಶಹಾಪುರ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT