ಮಂಗಳವಾರ, ಮೇ 26, 2020
27 °C
ದೂರದರ್ಶನದಲ್ಲಿ ಇಂಗ್ಲಿಷ್‌ ಮಾಧ್ಯಮದಲ್ಲೂ ಪುನರ್‌ಮನನ ಕಾರ್ಯಕ್ರಮ

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಕಾರಣ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತಕ್ಷಣ ಸಿದ್ಧತೆ ಆರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿದ ಅವರು, ಕೊರೊನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕು ಎಂದರು.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್‌ಮೆಂಟ್‌‌ಗಳೆಂದು ಗುರುತಿಸಿರುವ ಕಾರಣ, ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಅಭಿಪ್ರಾಯ ಪಡೆದರು.

ಜ್ವರ ತಪಾಸಣೆ ಕಡ್ಡಾಯ: ‘ಪರೀಕ್ಷಾ ಕೊಠಡಿಗೆ ಬರುವ ವಿದ್ಯಾರ್ಥಿಗಳಿಗೆ ಮುಖಗವಸು, ಸ್ಯಾನಿಟೈಜರ್‌ ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯಾರ್ಥಿ ನೆಲದ ಮೇಲಾಗಲೀ, ಬಯಲಿನಲ್ಲಾಗಲಿ ಕುಳಿತು ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು’ ಎಂದು ಸಚಿವರು ಸೂಚಿಸಿದರು.

ಇಂಗ್ಲಿಷ್‌ ಮಾಧ್ಯಮದಲ್ಲೂ ಪುನರ್‌ ಮನನ: ‘ಶಿಕ್ಷಣ ಇಲಾಖೆ ಚಂದನವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್‌ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್‌ಮನನ ತರಗತಿಗಳನ್ನು ಪ್ರಾರಂಭಿಸಿ’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸುರಕ್ಷಿತ ವಲಯಕ್ಕೆ ಸ್ಥಳಾಂತರ: ‘ಕಂಟೈನ್‌ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು’ ಎಂದು ಸಚಿವರು ಸೂಚಿಸಿದರು.

’ಉಪಕೇಂದ್ರಗಳನ್ನು ಸ್ಥಾಪಿಸುವುದು, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ತಲಾ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯಲ್ಲಿ ಮಕ್ಕಳನ್ನು ಕೂರಿಸುವುದು, ಪ್ರತಿ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಸಮಗ್ರವಾದ ಕ್ರಿಯಾಯೋಜನೆ ತಯಾರಿಸಬೇಕು’ ಎಂದು ಅವರು ಸೂಚನೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು