ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಆರ್ಥಿಕತೆ ಮೇಲೆ ಕೇಂದ್ರ ಪ್ರಹಾರ: ಈಶ್ವರ ಖಂಡ್ರೆ ವಾಗ್ದಾಳಿ

Last Updated 1 ಮಾರ್ಚ್ 2020, 8:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕೇಂದ್ರ ಸರ್ಕಾರ, ಕರ್ನಾಟಕದ ಆರ್ಥಿಕತೆಯ ಮೇಲೆ ಪ್ರಹಾರ ನಡೆಸಿದೆ. ಇದರಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ತೀರಾ ಹದಗೆಟ್ಟಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಪ್ರಾಯೋಜಕತ್ವದ ಯೋಜನೆಗಳಿಗೆ ಇದುವರೆಗೆ ಅನುದಾನ ಬಿಡುಗಡೆಯಾಗಿಲ್ಲ. ಜಿಎಸ್‌ಟಿ ಜಾರಿಯ ಪರಿಹಾರದ ಮೊತ್ತವೂ ಸಿಕ್ಕಿಲ್ಲ. ಸಿಗುವ ಭರವಸೆಯೂ ಇಲ್ಲ’ ಎಂದರು.

‘ರಾಜ್ಯದಲ್ಲೂ ಸಂಭವಿಸಿದ ಭೀಕರ ನೆರೆಯಿಂದ ಅಂದಾಜು ₹1 ಲಕ್ಷ ಕೋಟಿಯಷ್ಟುಹಾನಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ₹1,600 ಕೋಟಿ ಪರಿಹಾರ. ಇದರಿಂದ, ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರಿಗೆ ಸೂರು ನೀಡಲೂ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಜಾರಿಗೆ ಬಂದು ಏಳು ತಿಂಗಳಾಗಿದೆ. ಈ ಅವಧಿಯಲ್ಲಿ ಸಿಬ್ಬಂದಿಗೆ ಸಂಬಳ ನೀಡಲೂ ಹಣವಿಲ್ಲದಂತಹ ಪರಿಸ್ಥಿತಿಗೆ ಸರ್ಕಾರ ತಲುಪಿದೆ. ಹಾಲಿನ ದರ, ಬಸ್ ಟಿಕೆಟ್ ದರ, ಎಲ್‌ಪಿಜಿ ದರ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿದ ಅಚ್ಛೇ ದಿನ್ ಬಹುಶಃ ಇದೇ ಇರಬೇಕು’ ಎಂದು ವ್ಯಂಗ್ಯವಾಡಿದರು.

ವೈಫಲ್ಯ ಮುಚ್ಚಿಕೊಳ್ಳಲು ಯತ್ನ:‘ಕೇಂದ್ರ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತಂದು, ಜಾತಿ ಮತ್ತು ಧರ್ಮಗಳ ಮಧ್ಯೆ ಸಂಘರ್ಷ ಸೃಷ್ಟಿಸುತ್ತಿದೆ. ಇದರಿಂದಾಗಿ ದೇಶದಾದ್ಯಂತ ಗಲಭೆಗಳು ನಡೆಯುತ್ತಿವೆ’ ಎಂದರು.

‘ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಹಿಂಸಾತ್ಮಕವಾಗಿ ಹತ್ತಿಕ್ಕುತ್ತಿದೆ. ಇದೇ ಕಾರಣಕ್ಕಾಗಿ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದ ಗಲಭೆಗೆ 50ಕ್ಕೂ ಹೆಚ್ಚು ಮಂದಿ ಪ್ರಾಣ ತೆತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾದ ಗೃಹ ಸಚಿವ ಅಮಿತ್ ಶಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಧರ್ಮಗಳ ಮಧ್ಯೆ ಬೆಂಕಿ ಹಚ್ಚುವಂತಹ ಪ್ರಚೋದನಾಕಾರಿ ಹೇಳಿಕೆಗಳನ್ನು ಬಿಜೆಪಿಯವರು ನೀಡುತ್ತಿದ್ದಾರೆ. ಇದರಿಂದಾಗಿ ನಡೆಯುತ್ತಿರುವ ಗಲಭೆಯಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ. ಬಡವರ ಹೆಣಗಳ ರಾಶಿ ಮೇಲೆ ಕೇಂದ್ರ ಸರ್ಕಾರ ಅಧಿಕಾರ ನಡೆಸುತ್ತಿದೆ’ ಎಂದು ಟೀಕಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ, ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್‌ಕುಮಾರ್ ಪಾಟೀಲ, ರಾಜಶೇಖರ ಮೆಣಸಿನಕಾಯಿ, ಶಾಕೀರ್ ಸನದಿ, ಸ್ವಾತಿ ಮಾಳಗಿ, ಮಹೇಂದ್ರ ಸಿಂಘಿ ಮುಂತಾದವರು ಇದ್ದರು.

‘ಅಧಿಸೂಚನೆಗೆ ಬಿಜೆಪಿ ಕಾರಣವಲ್ಲ’
‘ಸುಪ್ರೀಂಕೋರ್ಟ್ ಸೂಚನೆಗೆ ಮೇರೆಗೆ, ಕೇಂದ್ರ ಸರ್ಕಾರ ಮಹದಾಯಿ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆದರೆ, ಬಿಜೆಪಿಯವರು ಇದು ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಮಹದಾಯಿ ಕುರಿತುನಿಜವಾಗಿಯೂ ಬದ್ಧತೆ ಇದ್ದಿದ್ದರೆ, 2018ರಲ್ಲೇ ಅಧಿಸೂಚನೆ ಹೊರಡಿಸಬೇಕಿತ್ತು’ ಎಂದು ಈಶ್ವರ ಖಂಡ್ರೆ ಹೇಳಿದರು.

‘ಗಾಂಧಿ ಭಾವಚಿತ್ರಕ್ಕೆ ಪಿಸ್ತೂಲು ತೋರಿಸಿದವರು ಹಾಗೂ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರು ನಿಜವಾದ ದೇಶದ್ರೋಹಿಗಳು. ಆದರೆ, ಅಂತಹವರ ಬದಲಿಗೆ ಅಮಾಯಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗುತ್ತಿದೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT