ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ವಿತರಣೆ ವಿಳಂಬ: ಅಮಾನತು

Last Updated 30 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗಿರುವ ಸಂಬಂಧ ಶಿಕ್ಷಣ ಸಂಯೋಜಕ (ಇಸಿಒ) ರವಣಪ್ಪ ಹಾಗೂ ಶಿಕ್ಷಕ ಶ್ರೀನಿವಾಸ್‌ ಎಂಬುವರನ್ನು ಅಮಾನತು ಮಾಡಲಾಗಿದೆ.

ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಯಾಗದ ಸಂಬಂಧ ದೂರು ಕೇಳಿಬಂದಿತ್ತು. ಹೀಗಾಗಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್‌.ಲತಾಕುಮಾರಿ ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಗೋದಾಮಿಗೆ ಗುರುವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಸುಮಾರು 57 ಸಾವಿರ ಪಠ್ಯಪುಸ್ತಕಗಳು ಪತ್ತೆಯಾಗಿದ್ದವು.

ಈ ಸಂಬಂಧ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮತ್ತು ಬಿಇಒ ಹಾಗೂ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಮೇಲ್ವಿಚಾರಣಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡುವಂತೆ ಸಿಇಒ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಆದೇಶಿಸಿದ್ದರು.

ಈ ಆದೇಶದ ಅನ್ವಯ ಡಿಡಿಪಿಐ ಕೆ.ರತ್ನಯ್ಯ ಅವರು ರವಣಪ್ಪ ಮತ್ತು ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್‌ ಅವರನ್ನು ಅಮಾನತು ಮಾಡಿದ್ದಾರೆ. ಜತೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿ ಇಲಾಖೆ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.

‘ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗಿದೆ. ಶಾಲೆಗಳಿಗೆ ರವಾನೆಯಾಗಿರುವ ಪಠ್ಯಪುಸ್ತಕಗಳ ಸಂಬಂಧ ಅಧಿಕಾರಿಗಳು ದಾಖಲೆಪತ್ರ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಸಕಾಲಕ್ಕೆ ಪಠ್ಯಪುಸ್ತಕ ಸಿಗದ ಕಾರಣ ಮಕ್ಕಳಿಗೆ ಶೈಕ್ಷಣಿಕವಾಗಿ ಸಮಸ್ಯೆಯಾಗಿದೆ ಎಂದು ಡಿಡಿಪಿಐ ವರದಿ ಕೊಟ್ಟಿದ್ದಾರೆ’ ಎಂದು ಸಿಇಒ ಲತಾಕುಮಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT