ಶನಿವಾರ, ಜೂಲೈ 4, 2020
22 °C

ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ: ಪೌರ ಕಾರ್ಮಿಕರ ನೇಮಕಕ್ಕೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ನಿವೃತ್ತಿ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವಂತಹ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೇಂದ್ರ ನೆರವಿನ ಅಮೃತ್ ಯೋಜನೆಯಡಿ ಕೇಂದ್ರದ ಪಾಲಿನ ಬಾಕಿ ಅನುದಾನ ಪಡೆಯಲು ರಾಜ್ಯದ ಪಾಲಿನ ಭಾಗವಾಗಿ ₹ 209 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಿಳಿಸಿದರು.

ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ ₹ 47.24 ಕೋಟಿ ಲಭ್ಯವಿದೆ. ಏಪ್ರಿಲ್ ಅಂತ್ಯದ ವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ. ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ನೀರಿಗಾಗಿ ಪರದಾಡಬಾರದು ಎಂದು  ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನಕ್ಕೆ ಯಾವುದೇ ತೊಡಕಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು