ಗುರುವಾರ , ಸೆಪ್ಟೆಂಬರ್ 19, 2019
29 °C
ಮುಖ್ಯಮಂತ್ರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ

ಎಸ್‌.ಟಿ ಮೀಸಲು ಹೆಚ್ಚಳಕ್ಕೆ ಸಮಿತಿ: ಬಿ.ಎಸ್.ಯಡಿಯೂರಪ್ಪ ಭರವಸೆ

Published:
Updated:
Prajavani

ಬೆಂಗಳೂರು: ಪರಿಶಿಷ್ಟ ಪಂಗಡದ (ಎಸ್‌.ಟಿ) ಮೀಸಲಾತಿ ಪ್ರಮಾಣವನ್ನು ಶೇ 7.5ರಷ್ಟು ಹೆಚ್ಚಳ ಮಾಡುವ ಸಂಬಂಧ ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗವು ಸೋಮವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಮನವಿ ಮಾಡಿತು.

ಇದಕ್ಕೆ ಸ್ಪಂದಿಸಿದ ಅವರು, ಅಧ್ಯಯನಕ್ಕೆ ಸಮಿತಿ ರಚಿಸಲಾಗುವುದು. ನಂತರ ಸಮಿತಿಯು ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವನ್ನು ಸಚಿವ ಸಂಪುಟದ ಮುಂದೆಯೂ ತಂದು ಸಮಗ್ರವಾಗಿ ಚರ್ಚಿಸಿ, ವಾಲ್ಮೀಕಿ ಸಮುದಾಯಕ್ಕೆ ಅನುಕೂಲ ಮಾಡಿಕೊಡಲಾಗುವುದು ಹೇಳಿದರು.

‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು. ಜಾತಿಯ ನಕಲಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮ‌ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ ಅವರು, ‘ನಮ್ಮ ಸಮುದಾಯಕ್ಕೆ ಸೇರಿದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರ ಜತೆಗೆ ಮತ್ತಷ್ಟು ಸಚಿವ ಸ್ಥಾನಗಳನ್ನು ನೀಡಬೇಕು’ ಎಂದು ಸ್ವಾಮೀಜಿ ಒತ್ತಾಯಿಸಿದರು.

ವಿಧಾನಸೌಧದ ಎದುರು ಹಾವನೂರು ಪ್ರತಿಮೆ ಪ್ರತಿಷ್ಠಾಪಿಸುವಂತೆ ಆಗ್ರಹಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಬಿ.ಶ್ರೀರಾಮುಲು ನಿಯೋಗದಲ್ಲಿದ್ದರು.

 

Post Comments (+)