ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನತೆಯ ಋಣ ತೀರಿಸುವ ಬದ್ಧತೆ’

ಲೋಕಸಭೆ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ
Last Updated 24 ಮೇ 2019, 19:52 IST
ಅಕ್ಷರ ಗಾತ್ರ

ಆನೇಕಲ್ : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜನ ಮೂರನೇ ಬಾರಿಗೆ ಆಶೀರ್ವಾದ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಜನತೆಯ ಋಣ ತೀರಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಅವರು ಪಟ್ಟಣದಲ್ಲಿ ಲೋಕಸಭೆ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಆನೇಕಲ್‌ನ ಅಭಿವೃದ್ಧಿಗಾಗಿ ಶಾಸಕರಾದ ಬಿ.ಶಿವಣ್ಣ ಹಾಗೂ ರಾಮಲಿಂಗಾರೆಡ್ಡಿ ಅವರೊಂದಿಗೆ ಕೈಜೋಡಿಸಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ಕಾವೇರಿ ನೀರು ಪೂರೈಕೆ ಮಾಡಲಾಗುತ್ತಿದೆ. ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಆನೇಕಲ್‌ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ನಗರಸಭೆಯನ್ನಾಗಿ ಮಾಡಲಾಗುವುದು ಎಂದರು.

ಶಾಸಕ ಬಿ.ಶಿವಣ್ಣ ಮಾತನಾಡಿ, ‘ಲೋಕಸಭಾ ಸದಸ್ಯರಾಗಿ ಹೆಚ್ಚಿನ ಬಹುಮತದಿಂದ ಆಯ್ಕೆಯಾಗಿರುವ ಡಿ.ಕೆ.ಸುರೇಶ್ ಅವರನ್ನು ತಾಲ್ಲೂಕಿನ ಜನತೆಯ ಪರವಾಗಿ ಅಭಿನಂದಿಸುತ್ತೇನೆ. ಲೋಕಸಭಾ ಫಲಿತಾಂಶದಿಂದ ಕಾರ್ಯಕರ್ತರು ಧೃತಿಗೆಡದೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಕ್ಷೇತ್ರದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕರ್ತರ ಜೊತೆಗಿರುತ್ತಾರೆ. ವಿವಿಧ ಚುನಾವಣೆಗಳಲ್ಲಿ ಸಂಘಟಿತರಾಗಿ ಕೆಲಸ ಮಾಡಬೇಕು’ ಎಂದರು.

ಲೋಕಸಭಾ ಚುನಾವಣೆಯ ಗೆಲುವಿನ ನಂತರ ಪಟ್ಟಣಕ್ಕೆ ಆಗಮಿಸಿದ ಡಿ.ಕೆ.ಸುರೇಶ್ ಅವರನ್ನು ಅಭಿನಂದಿಸಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಆನೇಕಲ್ ದೇವರಕೊಂಡಪ್ಪ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ತೆರಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜಣ್ಣ, ಚಂದ್ರಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ಜಿ.ಗೋಪಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶೀಲಮ್ಮ, ಪ್ರಚಾರ ಸಮಿತಿ ಅಧ್ಯಕ್ಷ ದೊಡ್ಡಹಾಗಡೆ ಹರೀಶ್‌ ಗೌಡ, ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರರೆಡ್ಡಿ, ಮುಖಂಡರಾದ ಪುರುಷೋತ್ತಮ್‌ರೆಡ್ಡಿ, ಪಿ.ಶಂಕರ್‌ಕುಮಾರ್, ಎನ್.ಎಸ್. ಪದ್ಮನಾಭ, ರವಿಚೇತನ್‌, ಬಳ್ಳೂರು ಮುನಿವೀರಪ್ಪ, ಬಿ.ಪಿ. ರಮೇಶ್, ಗಟ್ಟಹಳ್ಳಿ ಸೀನಪ್ಪ, ಅಚ್ಯುತರಾಜು, ಎನ್‌. ಸೋಮಶೇಖರರೆಡ್ಡಿ, ಎಂ.ಬಿ.ಐ. ಸೋಮು, ಪುಷ್ಪರಾಜು, ಮುನಾವರ್, ನಾಗವೇಣಿ, ರಘುಪತಿ ರೆಡ್ಡಿ, ಮಲ್ಲಿಕಾರ್ಜುನ್‌, ಯಲ್ಲಪ್ಪ ಹಾಜರಿದ್ದರು.

ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ

ಆನೇಕಲ್‌ ಪಟ್ಟಣದ ಥಳೀ ರಸ್ತೆ ಅಗಲೀಕರಣ ಶೀಘ್ರದಲ್ಲಿ ಕೈಗೊಳ್ಳಲಾಗುವುದು. ಆನೇಕಲ್ ಪಟ್ಟಣದಲ್ಲಿ ಸುಸಜ್ಜಿತ ಕ್ರೀಡಾಂಗಣವಿಲ್ಲ. ಹಲವು ವರ್ಷಗಳ ಹಿಂದೆ ನಿರ್ಮಿಸಿರುವ ಕ್ರೀಡಾಂಗಣ ಸಮರ್ಪಕವಾಗಿಲ್ಲ. ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಿ ಯುವಕರಿಗೆ ಸಮರ್ಪಿಸಲಾಗುವುದು ಎಂದು ಡಿ.ಕೆ.ಸುರೇಶ್ ಭರವಸೆ ನೀಡಿದರು.

ಕುಡಿಯುವ ನೀರು, ಸ್ವಚ್ಛತೆ, ರಸ್ತೆ, ಕೌಶಲ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆನೇಕಲ್‌ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಬಲ ನೀಡಬೇಕು ಎಂದರು.

***

ಮೇ 29ರಂದು ಆನೇಕಲ್‌ ಪುರಸಭೆಯ 27 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಆನೇಕಲ್‌ನ ಅಭಿವೃದ್ಧಿಗೆ ಕೈ ಜೋಡಿಸಬೇಕು
ಬಿ.ಶಿವಣ್ಣ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT