ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಘಟಕ ದುರಸ್ತಿಗೆ ತಿಂಗಳ ಗಡುವು: ಈಶ್ವರಪ್ಪ

ಅಧಿಕಾರಿಗಳಿಗೆ ಚಾಟಿ ಬೀಸಿದ ಈಶ್ವರಪ್ಪ
Last Updated 26 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಟ್ಟು ಹೋಗಿರುವ 3,000 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಿಂಗಳೊಳಗೆ ದುರಸ್ತಿ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಗಡುವು ನೀಡಿದ್ದಾರೆ.

ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಇತರೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ ರಾಜ್ಯದಲ್ಲಿ 17,510 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. 3,249 ಘಟಕಗಳು ವಿವಿಧ ಕಾರಣಗಳಿಗಾಗಿ ಕೆಟ್ಟು ಹೋಗಿವೆ. ತಕ್ಷಣವೇ ಸರಿಪಡಿಸಬೇಕು. ಕಾರಣಗಳನ್ನು ಕೇಳಲು ನಾನು ತಯಾರಿಲ್ಲ’ ಎಂದು ಖಡಕ್‌ ಸೂಚನೆ ನೀಡಿದರು.

‘ಇವು ಕೆಟ್ಟು ಹೋಗಲು ಕಾರಣಗಳೇನು ಎಂಬುದಕ್ಕೆ ವಿವರಣೆ ನೀಡಬೇಕು. ಈ ಘಟಕಗಳಿಗೆ ಪ್ರಮಾಣ ಪತ್ರ ನೀಡಿದ ಎಂಜಿನಿಯರ್‌ಗಳನ್ನು ಜವಾಬ್ದಾರರನ್ನಾಗಿ ಮಾಡಬೇಕು.ಸಬೂಬು ನೀಡದೇ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸಿ’ ಎಂದೂ ತಾಕೀತು ಮಾಡಿದರು.

ಶುದ್ಧ ಕುಡಿಯುವ ನೀರಿನ ಘಟಕಗಳ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.ನಿರ್ವಹಣೆ ವೆಚ್ಚವೆಂದು ಗ್ರಾಮ ಪಂಚಾಯಿತಿಗಳಿಗೆ ತಲಾ ₹3,000 ನೀಡಲು ನಿರ್ಧರಿಸಲಾಯಿತು. ಈವರೆಗೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್‌) ಇದನ್ನು ನಿರ್ವಹಿಸುತ್ತಿತ್ತು.

ರಾಜ್ಯದ 45 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ವಿಫಲಗೊಂಡಿರುವುದರಿಂದ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಕೋಟಿಗಟ್ಟಲೆ ಹಣ ಖರ್ಚು ಮಾಡಿ ಯೋಜನೆ ಜಾರಿಗೊಳಿಸಲಾಗಿತ್ತು. ಇಷ್ಟು ಬೇಗ ವಿಫಲವಾಗಲು ಕಾರಣಗಳೇನು ಎಂದು ಅವರು ಪ್ರಶ್ನಿಸಿದರು.

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರದಂತಹ ಬರಪೀಡಿತ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿತ್ತು. ರಾಜ್ಯದಲ್ಲಿ 477 ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಜಾರಿ ಮಾಡಲಾಗಿತ್ತು. ಅದರಲ್ಲಿ 432 ಕಾರ್ಯ ನಿರ್ವಹಿಸುತ್ತಿವೆ. ಎಲ್ಲವೂ ಸುಸ್ಥಿತಿಯಲ್ಲಿರಬೇಕು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT