ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಬೀಳುತ್ತದೆ, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನಬೇಡಿ: ಯಡಿಯೂರಪ್ಪ ಮನವಿ

Last Updated 5 ಮೇ 2019, 10:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಮ್ಮಿಶ್ರ ಸರ್ಕಾರ ಬೀಳಲಿದೆ, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಎಲ್ಲೂ ಹೇಳಬೇಡಿ. ದಯಮಾಡಿ ಈ ಬಗ್ಗೆ ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಮ್ಮ ಪಕ್ಷದ ಮುಖಂಡರಿಗೆ ಮನವಿ ಮಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರ ಇರಲ್ಲ ಎಂದು ನಾನು ಎಲ್ಲಿಯೂ ಮಾತನಾಡಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ’ನಾನು ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸೇ ಕಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ತೆಗೆದುಕೊಳ್ಳುವ ತೀರ್ಮಾನದ ಆಧಾರದ ಮೇಲೆ ಮುಂದಿನ ಬಗ್ಗೆ ಯೋಚಿಸೋಣ’ ಎಂದು ಹೇಳಿದರು.

ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಗಿಲ್ಲ. ಅವರ ವಿರುದ್ಧ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌, ಜೆಡಿಎಸ್‌ ಮುಖಂಡರ ಕಚ್ಚಾಟ ಉಲ್ಬಣವಾಗಲಿದ್ದು, ರಾಜ್ಯ ರಾಜಕೀಯದ ಮೇಲೆ ಇದರ ಪರಿಣಾಮ ಏನಾದರೂ ಆಗಬಹುದು ಎಂದು ಸೂಕ್ಷ್ಮವಾಗಿ ಹೇಳಿದರು.

ರೈತರಿಗೆ ಸಾಲಮನ್ನಾ ಋಣಮುಕ್ತಿ ಪತ್ರ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಇದೀಗ ಸಾಂತ್ವಾನ ಪತ್ರ ನೀಡುತ್ತೇನೆ ಎಂದಿರುವುದು ನಗೆಪಾಟಲಿನ ವಿಷಯ. ಈ ಮೂಲಕ ರೈತ ಸಮುದಾಯಕ್ಕೆ ಅವರು ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.

ವರಿಷ್ಠರಿಗೆ ಬಿಟ್ಟ ವಿಷಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಒಬ್ಬ ವ್ಯಕ್ತಿ ಎರಡು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ರಾಷ್ಟ್ರ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಇದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT