ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಸೌಲಭ್ಯ ನೀಡಿ

Last Updated 20 ಡಿಸೆಂಬರ್ 2019, 13:50 IST
ಅಕ್ಷರ ಗಾತ್ರ

ಶಿವಮೊಗ್ಗ: ಸರ್ಕಾರಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡುವುದಕ್ಕಾಗಿ ಇಬ್ಬರು ಸಿಬ್ಬಂದಿಯ ಅವಶ್ಯಕತೆ ಇದ್ದು, ಇದಕ್ಕಾಗಿ ಸರ್ಕಾರಕ್ಕೆ ಶೀಘ್ರದಲ್ಲೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಚ್ಛತೆ ಇಲ್ಲದಿದ್ದರೆ ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಬರುವುದಿಲ್ಲ. ಶುಚಿತ್ವಕ್ಕೆ ಮೊದಲು ಆದ್ಯತೆ ನೀಡಬೇಕು ಹಾಗಾಗಿ ಶಾಲೆಗಳಲ್ಲಿ ಸ್ವಚ್ಛತಾ ಸಿಬ್ಬಂದಿಯ ಅಗತ್ಯವಿದೆ ಎಂದರು.

ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ತಿಳಿಸಿದರು. ಈ ವೇಳೆ ಶಾಸಕ ಅಶೋಕ್‌ ನಾಯ್ಕ್‌ ಎಷ್ಟು ಫಲಿತಾಂಶ ಬರಲಿದೆ ಎಂದು ಪ್ರಶ್ನಿಸಿದರು. ಈ ಬಾರಿ ಶೇ 90ರಷ್ಟು ಫಲಿತಾಂಶದ ಗುರಿ ಹೊಂದಲಾಗಿದೆ. ಇದಕ್ಕಾಗಿ ವಿಶೇಷ ತರಗತಿ ನಡೆಸಲು ಎಲ್ಲ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಓದಿನಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಿ ಅವರ ಪ್ರಗತಿಗೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಹಾಸ್ಟೆಲ್‍ಗಳಲ್ಲಿರುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕೋರ್ಸ್‍ಗಳಿಗೆ ಜಾಗೃತಿ ಮೂಡಿಸುವ ಸಲುವಾಗಿ ತರಬೇತಿ ಕೊಡಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಈಗಾಗಲೇ ಪದವಿ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್‍ನಂತಹ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.

‘ವಿದ್ಯಾರ್ಥಿ ನಿಲಯಗಳ ದುರಸ್ತಿಗೆ ಸಮಾಜ ಕಲ್ಯಾಣ ಇಲಾಖೆಗೆ ಅನುದಾನ ಬಂದಿದ್ದು, ನನ್ನ ಗಮನಕ್ಕೆ ತಂದಿಲ್ಲ’ ಎಂದು ಶಾಸಕರು ಗರಂ ಆದರು. ಈಗಾಗಲೆ ₹ 20 ಲಕ್ಷ ಅನುದಾನ ಬಂದಿದೆ. ಅದನ್ನು ಯಾವ ಯಾವ ವಿದ್ಯಾರ್ಥಿ ನಿಲಯಗಳ ದುರಸ್ತಿಗೆ ಬಳಸಲಾಗುತ್ತಿದೆ ಎಂಬುದನ್ನು ತಿಳಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಮೂಲ ಸೌಲಭ್ಯಗಳಿಗೆ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕರು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದೆ. ರಾತ್ರಿ ಒಬ್ಬ ಸಿಬ್ಬಂದಿ ಕಡ್ಡಾಯವಾಗಿ ಉಳಿಯಬೇಕು. ಇದರಿಂದ ತುರ್ತು ಆರೋಗ್ಯ ಸಮಸ್ಯೆ ಇರುವವರು ಆರೋಗ್ಯ ಕೇಂದ್ರಗಳಿಗೆ ಬರಲು ಸಹಾಯವಾಗುತ್ತದೆ ಎಂದರು.

‘ಸಣ್ಣ ನೀರಾವರಿ ಇಲಾಖೆಯಿಂದ ಕೊರೆಸಿರುವ ಬೋರ್‌ವೆಲ್‌ಗಳಿಗೆ ಕೂಡಲೇ ವಿದ್ಯುತ್‌ ಸಂಪರ್ಕ ನೀಡಬೇಕು. ಮಾರ್ಚ್‌ನಲ್ಲಿ ಮುಗಿಯಬೇಕಿದ್ದ ನಿರಂತರ ಜ್ಯೋತಿ ಕಾಮಗಾರಿ ಈ ವರೆಗೂ ಮುಗಿದಿಲ್ಲ. ಕೂಡಲೇ ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೀತಾ ಜಯಶೇಖರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಿರ್ಮಲಾ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್‍ಕುಮಾರ್, ಇಒ ಅತಿಕ್ ಪಾಷಾ, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ಸೌಮ್ಯ ಭೋಜಾ ನಾಯ್ಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT