ಮಂಗಳವಾರ, ಸೆಪ್ಟೆಂಬರ್ 21, 2021
21 °C
ಕೋವಿಡ್‌–19 ಬಿಕ್ಕಟ್ಟಿನಿಂದ ಶಾಲೆಗಳಿಗೆ ಬೀಗ

ನಾಲ್ಕು ಕೋಟಿ ಮಕ್ಕಳು ಶಿಕ್ಷಣದಿಂದ ವಂಚಿತ: ಗುಟೆರಸ್‌ ಕಳವಳ

ಪಿಟಿಐ/ ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ಕೋವಿಡ್‌–19 ಬಿಕ್ಕಟ್ಟಿನಿಂದ ಶಾಲೆಗಳಿಗೆ ಬೀಗ ಬಿದ್ದಿದೆ. ಹೀಗಾಗಿ ವಿಶ್ವದಾದ್ಯಂತ 160 ಕೋಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪೂರ್ವ ಪ್ರಾಥಮಿಕ ಹಂತದ ನಾಲ್ಕು ಕೋಟಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ’ ಎಂದು ವಿಶ್ವ ಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಕಳವಳ ವ್ಯಕ್ತಪಡಿಸಿದ್ದಾರೆ.

‘ಶಿಕ್ಷಣ ಮತ್ತು ಕೋವಿಡ್‌–19’ ಎಂಬ ಹೆಸರಿನ ಹೊಸ ನೀತಿಯನ್ನು ಅವರು ಮಂಗಳವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಈ ಅಂಶಗಳನ್ನು ಉಲ್ಲೇಖಿಸಿದ್ದಾರೆ.

‘ವ್ಯಕ್ತಿಗತ ಬೆಳವಣಿಗೆ ಹಾಗೂ ಸಮಾಜದ ಏಳ್ಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸುವ ಮೂಲಕ ಅಸಮಾನತೆಯನ್ನು ಹೋಗಲಾಡಿಸಲು ಶಿಕ್ಷಣ ನೆರವಾಗಿದೆ. ಕೋವಿಡ್‌ 19 ಬಿಕ್ಕಟ್ಟಿನಿಂದಾಗಿ 160ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಹಿನ್ನಡೆ ಉಂಟಾಗಿದೆ. ಮಕ್ಕಳು ಸುದೀರ್ಘ ಸಮಯ ಶಾಲೆಯಿಂದ ದೂರವಿರುವ ಕಾರಣ ಅವರ ಕಲಿಕಾ ಸಾಮರ್ಥ್ಯವು ಕುಸಿಯುವ ಅಪಾಯ ಎದುರಾಗಿದೆ’ ಎಂದು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

‘ಈಗ ಉದ್ಭವಿಸಿರುವ ಬಿಕ್ಕಟ್ಟಿನಿಂದಾಗಿ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇದರಿಂದಾಗಿ ಅಂದಾಜು 2.38 ಕೋಟಿ ಮಕ್ಕಳು ಹಾಗೂ ಯುವಕರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಮತ್ತು ಕಾಲೇಜುಗಳಿಂದ ವಿಮುಖವಾಗುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.

‘ಮಕ್ಕಳು ಮತ್ತು ಯುವಕರು ಶಾಲೆ ಬಿಡುವುದನ್ನು ತಡೆಯುವ ಸಲುವಾಗಿ ‘ಸೇವ್‌ ಅವರ್‌ ಫ್ಯೂಚರ್‌’ ಅಭಿಯಾನವನ್ನು ಆರಂಭಿಸಿದ್ದೇವೆ. ಕೋವಿಡ್‌ ಬಿಕ್ಕಟ್ಟಿನ ಸಮಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡುವಂತೆ ಸರ್ಕಾರಗಳನ್ನು ಒತ್ತಾಯಿಸುವುದು ಹಾಗೂ ಮಕ್ಕಳು ಮತ್ತು ಯುವಕರ ಧ್ವನಿಗೆ ಬಲ ತುಂಬುವುದು ಈ ಅಭಿಯಾನ ಮೂಲ ಧ್ಯೇಯ’ ಎಂದು ಅವರು ನುಡಿದಿದ್ದಾರೆ.

‘ಕೋವಿಡ್‌ ನಿಯಂತ್ರಣದಲ್ಲಿರುವ ಭಾಗಗಳಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು ಮತ್ತು ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದಕ್ಕೆ ಮೊದಲ ಆದ್ಯತೆ ನೀಡಬೇಕು. ಈ ವೇಳೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಆಡಳಿತರೂಢ ಸರ್ಕಾರಗಳು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆದಷ್ಟು ಹೆಚ್ಚಿನ ಅನುದಾನ ಒದಗಿಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು