ಶೈಕ್ಷಣಿಕ ಪ್ರಗತಿಯೇ ರಾಷ್ಟ್ರದ ಅಭಿವೃದ್ಧಿಗೆ ಮಾನದಂಡ: ಆರ್.ಧ್ರುವನಾರಾಯಣ

7
ಶಿಕ್ಷಕರ ದಿನಾಚರಣೆ: ಶಿಕ್ಷಕರು, ನಿವೃತ್ತ ಶಿಕ್ಷಕರಿಗೆ ಸನ್ಮಾನ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಶೈಕ್ಷಣಿಕ ಪ್ರಗತಿಯೇ ರಾಷ್ಟ್ರದ ಅಭಿವೃದ್ಧಿಗೆ ಮಾನದಂಡ: ಆರ್.ಧ್ರುವನಾರಾಯಣ

Published:
Updated:
Deccan Herald

ಚಾಮರಾಜನಗರ: ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಕ್ಷೇತ್ರ ಮಾನದಂಡವಾಗುತ್ತದೆ. ಶಿಕ್ಷಣ ಕ್ಷೇತ್ರ ಪ್ರಗತಿಯಲ್ಲಿರುವ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ ಎಂದು ಸಂಸದ ಆರ್.ಧ್ರುವನಾರಾಯಣ ಹೇಳಿದರು.

ಪಟ್ಟಣದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರೂ ಗುಣಮಟ್ಟದ ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರಿ ಅಥವಾ ಖಾಸಗಿ ಶಾಲಾ ಮಕ್ಕಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕರನ್ನಾಗಿ ಮಾಡಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ಹೇಳಿದರು.

‘ಈ ಹಿಂದೆ ಸರ್ವಶಿಕ್ಷಣ ಅಭಿಯಾನದ ಅಡಿಯಲ್ಲಿ ಅನುದಾನ ಬಿಡುಗಡೆ ಆಗುತ್ತಿತ್ತು. ಆದರೆ, ಈಗ ಕೇಂದ್ರ ಸರ್ಕಾರವು ಆ ಅನುದಾನವನ್ನು ನೀಡುತ್ತಿಲ್ಲ. ಶಿಕ್ಷಣ ಸಚಿವ ಎನ್.ಮಹೇಶ್ ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಜನಪ್ರತಿನಿಧಿಗಳು ಕೂಡ ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ‘2016–17ರಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಫಲಿತಾಂಶ ಉತ್ತಮವಾಗಿತ್ತು. 2017–18ರಲ್ಲಿ ಹಿನ್ನಡೆಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಗುಣಮಟ್ಟದ ಫಲಿತಾಂಶ ಉಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸರ್ಕಾರವು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಇದಕ್ಕೆ ಪೂರಕವಂತೆ ಶಿಕ್ಷಕರ ನೇಮಕಾತಿ ಆರಂಭವಾಗಲಿದೆ. ಉತ್ತಮ ಪ್ರಜೆಗಳನ್ನು ರೂಪಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದರು.

ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗದಿಂದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರು ಹಾಗೂ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡಿ ನಿವೃತ್ತರಾದವರನ್ನು ಸನ್ಮಾನಿಸಲಾಯಿತು. ಉತ್ತಮ ಶಿಕ್ಷಕರಿಗೆ ₹5 ಸಾವಿರ ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕೃಷ್ಣ, ಉಪಾಧ್ಯಕ್ಷ ಜೆ.ಯೋಗೇಶ್, ಸದಸ್ಯೆ ಉಮಾವತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮರುಗದಮಣಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷೆ ನೇತ್ರಾವತಿ, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಇದ್ದರು.

ಕಾನೂನು ಕಾಲೇಜಿಗೆ ₹1 ಕೋಟಿ

ಜಿಲ್ಲೆಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಕೃಷಿ ಕಾಲೇಜಿನಂತೆ ಕಾನೂನು ಕಾಲೇಜು ಆರಂಭಿಸಲು ಅನುಮತಿ ಸಿಕ್ಕಿದೆ. ನಬಾರ್ಡ್‌ನಿಂದ ಕೃಷಿ ಕಾಲೇಜು ಮೂಲಸೌಲಭ್ಯಕ್ಕೆ ₹20 ಕೋಟಿ ಹಾಗೂ ಕಾನೂನು ಕಾಲೇಜಿಗೆ ₹1 ಕೋಟಿ ದೊರೆತಿದೆ. ಕಾನೂನು ಕಾಲೇಜು ತಾತ್ಕಾಲಿಕವಾಗಿ ಈ ವರ್ಷದಿಂದಲೇ ಆರಂಭವಾಗುವ ನಿರೀಕ್ಷೆಯಿದೆ ಎಂದು ಧ್ರುವನಾರಾಯಣ ಹೇಳಿದರು.

ಶಿಕ್ಷಕರ ಬೇಡಿಕೆಗಳು

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ವೇಳಾಪಟ್ಟಿಯಂತೆ ತ್ವರಿತವಾಗಿ ಪ್ರಾರಂಭಿಸಬೇಕು.

ಸರ್ಕಾರ 6ನೇ ವೇತನ ಆಯೋಗದ ಅಂತಿಮ ವರದಿ ಯಥಾವತ್ತಾಗಿ ಒಪ್ಪಿಕೊಳ್ಳಬೇಕು.

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು

ಎಲ್ಲ ಸೇವಾನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರು ಎಂದು ಪರಿಗಣಿಸಿ ಬಡ್ತಿ ನೀಡಬೇಕು.

ಸಮಾನ ಶಾಲಾ ಶಿಕ್ಷಣ ನೀತಿ ಜಾರಿಯಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ, ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು.

ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ಬಗೆಹರಿಸಬೇಕು.

ನಲಿ–ಕಲಿ ಪದ್ಧತಿ ಅಂಶಗಳನ್ನು ಉಳಿಸಿ ‘ಬಹುವರ್ಗ ಬೋಧನಾ ವ್ಯವಸ್ಥೆ’ ರದ್ದುಗೊಳಿಸಬೇಕು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !