ಬುಧವಾರ, ನವೆಂಬರ್ 20, 2019
20 °C

ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲಾಧಿಕಾರಿ ಚಾಲನೆ

Published:
Updated:
Prajavani

ಚಾಮರಾಜನಗರ: ಸೆ.1ರಿಂದ ಅ.15ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದರು.

‘ನಿಗದಿತ ಅರ್ಹತಾ ದಿನಾಂಕ ನಿಗದಿಪಡಿಸಿ, ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಆದ್ದರಿಂದ ಜಿಲ್ಲೆಯಲ್ಲಿ ದೃಢೀಕರಣ ಕಾರ್ಯ ನಡೆಸಲಾಗುತ್ತಿದೆ. ಈ ಅವಧಿಯಲ್ಲಿ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆಯುವುದು, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕರಣ ಮಾಡಿಕೊಳ್ಳಲು ಅವಕಾಶ ಇದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಮತದಾರರ ಹೆಸರು ಸೇರ್ಪಡೆಗಾಗಿ ನಮೂನೆ –6ರ ಅರ್ಜಿಯೊಂದಿಗೆ ಹುಟ್ಟಿದ ದಿನಾಂಕ, ವಯಸ್ಸಿನ, ವಿಳಾಸ ದೃಢೀಕರಣ, ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳನ್ನು ಹಾಜರುಪಡಿಸಬೇಕಾಗುತ್ತದೆ. ಸ್ಥಳ ಬದಲಾವಣೆ ಮತ್ತು ಮರಣ ಪ್ರಕರಣಗಳಿಗೆ ಸಂಬಂಧಿಸಿದಂತೆ, ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬಹುದು’ ಎಂದರು.

‘ಮತದಾರರ ಪಟ್ಟಿಯಲ್ಲಿ ಹೆಸರು, ತಂದೆಯ ಹೆಸರು, ಲಿಂಗ, ಹುಟ್ಟಿದ ದಿನಾಂಕ, ವಿಳಾಸ, ಫೋಟೋ ತಿದ್ದುಪಡಿಗಾಗಿ ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಬದಲಾವಣೆ ಮಾಡಲು ನಮೂನೆ-8ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.

ದಾಖಲೆಗಳು: ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕರಣ ಗಳಿಗೆ ಸಂಬಂಧಿಸಿದಂತೆ ಭಾರತೀಯ ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸರ್ಕಾರಿ, ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪುಸ್ತಕ, ರೈತರ ಗುರುತಿನ ಚೀಟಿ ಈ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಇರಬೇಕು’ ಎಂದರು.

‘ಈ ದಾಖಲೆಗಳಲ್ಲಿ ಒಂದನ್ನು ನಾಗರಿಕರು ಹತ್ತಿರದಲ್ಲಿರುವ ಸಾಮಾನ್ಯ ಸೇವಾ ಕೇಂದ್ರ (ಹೋಬಳಿ ಮಟ್ಟದಲ್ಲಿರುವ ನಾಡಕಚೇರಿಗಳು), ಮತದಾರರ ನೋಂದಣಾಧಿಕಾರಿ ಕಚೇರಿಯ ಮತದಾರರ ಪೂರಕ ಕೇಂದ್ರ (ಉಪ ವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ) ಅಟಲ್‌ಜೀ ಜನಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯಿತಿ) ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ, ಮತದಾರರ ಪಟ್ಟಿಯನ್ನು ಪರಿಶೀಲಿಸಿ ದೃಢೀಕರಿಸಿಕೊಳ್ಳಬಹುದು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಶಿರಸ್ತೇದಾರ್ ಶಂಕರರಾವ್ ಹಾಗೂ ಅಧಿಕಾರಿಗಳು ಹಾಜರಿದ್ದರು.

ಪರಿಶೀಲನೆಗೆ ಮೊಬೈಲ್‌ ‌ಆ್ಯಪ್‌, ಸಹಾಯವಾಣಿ

‘ಮತದಾರರ ಪಟ್ಟಿಯನ್ನು ಪರಿಶೀಲಿಸಿ ದೃಢೀಕರಿಸಿಕೊಳ್ಳಲು ಮತದಾರರ ಸಹಾಯವಾಣಿ, ಮೊಬೈಲ್ ಆ್ಯಪ್, ಹೊಸ ಎನ್‌ವಿಎಸ್‌ಪಿ ಪೋರ್ಟಲ್ (www.nvsp.in), ಮತದಾರರ ಸಹಾಯವಾಣಿ–1950 ಮೂಲಕ ಅವಕಾಶ ಕಲ್ಪಿಸಲಾಗಿದೆ’ ಎಂದು ಕಾವೇರಿ ಹೇಳಿದರು.

‘ಜಿಲ್ಲೆಯ ಎಲ್ಲ ಮತದಾರರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿ, ದೃಢೀಕರಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ನೀಡಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)